ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಬಿರುಸಿನ ವೇಗದಲ್ಲಿ ನಡೆಯುತ್ತಿದೆ.
ಇಂದು ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಬಿರುಸುಗೊಂಡಿದ್ದು, ಶಾಂತಿಯುತವಾಗಿ ಮತದಾನ ನಡೆಯುತ್ತಿದೆ.
ಮೊದಲ ಹಂತದಲ್ಲಿ 64 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧಾರ ಮಾಡಲು 7.14 ಲಕ್ಷಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮುಂದಾಗಿದ್ದಾರೆ.
ಇಂದು ಸುಮಾರು ಮೂರು ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.
ಈ ಮಧ್ಯೆ ಮೊದಲ ಹಂತದಲ್ಲಿ 35,000ಕ್ಕೂ ಹೆಚ್ಚು ಕಾಶ್ಮೀರಿ ಪಂಡಿತರು ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಒಂದು ದಶಕದ ಅವಧಿಯಲ್ಲಿ ಇಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಸಂವಿಧಾನದ 370ನೇ ವಿಧಿಯ ಅಡಿಯಲ್ಲಿ ನೀಡಿದ್ದ ವಿಶೇಷ ಸ್ಥಾನಮಾನವನ್ನು ಕೇಂದ್ರ ಸರ್ಕಾರ 2019ರಲ್ಲಿ ಹಿಂಪಡೆದು, ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿತು.
ಆ ನಂತರದಲ್ಲಿ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಇಂದು 64 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.