ಹೊಸದಿಲ್ಲಿ : ಆಡಳಿತರೂಢ ಎನ್‌ಡಿಎ ಹಾಗೂ ಪ್ರತಿಪಕ್ಷಗಳ ಮೈತ್ರಿಕೂಟ ಇಂಡಿಯಾ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದೇಶದ ೧೭ನೇ ಉಪರಾಷ್ಟ್ರಪತಿ ಚುನಾವಣೆ ನಾಳೆ(ಸೆ.9) ನಡೆಯಲಿದ್ದು, ನರೇಂದ್ರ ಮೋದಿ ಹಾಗೂ ರಾಹುಲ್ ಗಾಂಧಿ ನಡುವಿನ ಸಮರದಲ್ಲಿ ಯಾರ ಕೈ ಮೇಲಾಗಲಿದೆ ಎಂಬುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ಬೆಳಗ್ಗೆ ೯ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನ ನಡೆಯಲಿದೆ. ಲೋಕಸಭೆ ಹಾಗೂ ರಾಜ್ಯ ಸಭೆ ಸದಸ್ಯರು (ನಾಮ ನಿರ್ದೇಶನ ಸೇರಿದಂತೆ) ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಸಂಜೆ ನಂತರ ಫಲಿತಾಂಶ ಪ್ರಕಟಗೊಳ್ಳಲಿದೆ.
ಈಗಿನ ಅಂಕಿ ಸಂಖ್ಯೆಗಳ ಪ್ರಕಾರ ಎನ್‌ಡಿಎ ಬೆಂಬಲಿತ ಅಭ್ಯರ್ಥಿ ಹಾಗೂ ಮಹಾರಾಷ್ಟ್ರದ ಹಾಲಿ ರಾಜ್ಯಪಾಲರಾಗಿರುವ ಸಿ.ಪಿ. ರಾಧಾಕೃಷ್ಣನ್ ಅವರ ಗೆಲವು ತುಂಬಾ ಸ್ಪಷ್ಟವಾಗಿದೆ. ಇವರಿಗೆ ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಮತ್ತು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ್ ರೆಡ್ಡಿ ಪ್ರಬಲ ಸ್ಪರ್ಧೆ ಒಡ್ಡಿರುವುದು ಚುನಾವಣಾ ಕಣದ ಕಾವು ಹೆಚ್ಚುವಂತೆ ಮಾಡಿದೆ. ರಾಜಕಾರಣದಲ್ಲಿ ನಡೆಯುವ ಕೊನೆ ಕ್ಷಣದ ಬೆಳವಣಿಗೆಗಳು ಇಡೀ ಲೆಕ್ಕಚಾರವನ್ನೇ ಬುಡಮೇಲು ಮಾಡಬಹುದು.
ದೇಶದ ಎರಡನೇ ಅತ್ಯುನ್ನತ ಸಾಂವಿಧಾನಿಕ ಹುದ್ದೆಯಾದ ಉಪರಾಷ್ಟ್ರಪತಿ ಸ್ಥಾನಕ್ಕೆ ನಡೆಯಲಿರುವ ಚುನಾವಣೆ, ಇದೀಗ ಕೇವಲ ಸಂಖ್ಯಾಬಲದ ಸ್ಪರ್ಧೆಯಾಗಿ ಉಳಿದಿಲ್ಲ. ಬದಲಾಗಿ, ಇದು ದಕ್ಷಿಣ ಭಾರತದ ಇಬ್ಬರು ಪ್ರಮುಖ ವ್ಯಕ್ತಿಗಳ ನಡುವಿನ ಹೋರಾಟವಾಗಿ ಮಾರ್ಪಟ್ಟಿದ್ದು, ರಾಷ್ಟ್ರ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.ಇದು ರಾಜಕೀಯ ತಂತ್ರಗಾರಿಕೆ ಹಾಗೂ ಸೈದ್ಧಾಂತಿಕ ಸಂಘರ್ಷಕ್ಕೆ ವೇದಿಕೆಯಾಗಿದೆ.
ಆಡಳಿತಾರೂಢ ಬಿಜೆಪಿ ನೇತೃತ್ವದ ಎನ್‌ಡಿಎ, ತಮಿಳುನಾಡಿನ ಹಿರಿಯ ರಾಜಕಾರಣಿ ಮತ್ತು ಮಹಾರಾಷ್ಟ್ರದ ಹಾಲಿ ರಾಜ್ಯಪಾಲ ಸಿ.ಪಿ.ರಾಧಾಕೃಷ್ಣನ್ ಅವರನ್ನು ಕಣಕ್ಕಿಳಿಸಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ, ಅದರಲ್ಲೂ ವಿಶೇಷವಾಗಿ ತಮಿಳುನಾಡಿನಲ್ಲಿ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುವ ಸ್ಪಷ್ಟ ಕಾರ್ಯತಂತ್ರವನ್ನು ಬಿಜೆಪಿ ಪ್ರದರ್ಶಿಸಿದೆ.
ಇದಕ್ಕೆ ಪ್ರತಿಯಾಗಿ, ಇಂಡಿಯಾ ಮೈತ್ರಿಕೂಟವು ಸುದೀರ್ಘ ಚರ್ಚೆಯ ನಂತರ, ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಹಾಗೂ ಆಂಧ್ರ ಪ್ರದೇಶ ಮೂಲದ ಬಿ. ಸುದರ್ಶನ್ ರೆಡ್ಡಿ ಅವರನ್ನು ತಮ ಅಭ್ಯರ್ಥಿಯನ್ನಾಗಿ ಘೋಷಿಸುವ ಮೂಲಕ ಅಚ್ಚರಿ ಮೂಡಿಸಿದೆ. ಅನುಭವಿ ರಾಜಕಾರಣಿಯ ವಿರುದ್ಧ ನ್ಯಾಯಾಂಗದ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಕಣಕ್ಕಿಳಿಸುವ ಮೂಲಕ, ವಿಪಕ್ಷಗಳು ಈ ಚುನಾವಣೆಯನ್ನು ಸೈದ್ಧಾಂತಿಕ ಹೋರಾಟವಾಗಿ ಪರಿವರ್ತಿಸಲು ಯತ್ನಿಸಿವೆ.
ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ಅವರು ಜುಲೈ ೨೨ ರಂದು ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಈ ಚುನಾವಣೆ ನಡೆಯಲಿದೆ. ರಾಜ್ಯಸಭೆಯ ಕಾರ್ಯದರ್ಶಿ ಜನರಲ್ ಪಿ.ಸಿ.ಮೋದಿ ಅವರನ್ನು ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ. ರಾಜ್ಯಸಭಾ ಸಚಿವಾಲಯದ ಜಂಟಿ ಕಾರ್ಯದರ್ಶಿ ಗರಿಮಾ ಜೈನ್ ಮತ್ತು ರಾಜ್ಯಸಭಾ ಸಚಿವಾಲಯದ ನಿರ್ದೇಶಕ ವಿಜಯ್ ಕುಮಾರ್ ಅವರನ್ನು ಸಹಾಯಕ ಚುನಾವಣಾಧಿಕಾರಿಗಳಾಗಿ ನೇಮಿಸಲಾಗಿದೆ. ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ನಡೆಸಲು ಸಂವಿಧಾನದ ವಿಧಿ ೩೨೪ರ ಅಡಿಯಲ್ಲಿ ಭಾರತೀಯ ಚುನಾವಣಾ ಆಯೋಗಕ್ಕೆ ಅಧಿಕಾರವಿದೆ. ವಿಧಿ ೬೬(೧)ರ ಪ್ರಕಾರ, ಉಪರಾಷ್ಟ್ರಪತಿಯನ್ನು ರಾಜ್ಯಸಭೆಯ ಚುನಾಯಿತ ಸದಸ್ಯರು, ರಾಜ್ಯಸಭೆಯ ನಾಮನಿರ್ದೇಶಿತ ಸದಸ್ಯರು ಮತ್ತು ಲೋಕಸಭೆಯ ಚುನಾಯಿತ ಸದಸ್ಯರನ್ನು ಒಳಗೊಂಡ ಚುನಾವಣಾ ಕಾಲೇಜ್ ಆಯ್ಕೆ ಮಾಡುತ್ತದೆ.





