ಗುಜರಾತ್: ಇಲ್ಲಿನ ವಡೋದರಾ ಸೇತುವೆ ಕುಸಿತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂ ಪರಿಹಾರ ಘೋಷಣೆ ಮಾಡಿದ್ದಾರೆ.
ಗುಜರಾತ್‌ನ ಗಂಭೀರಾ ಸೇತುವೆಯ ಒಂದು ಭಾಗ ಕುಸಿದು ಬಿದ್ದ ಪರಿಣಾಮ ಈ ಘಟನೆ ನಡೆದಿದೆ. ಘಟನೆಯಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, ಇನ್ನೂ ಅನೇಕರು ನಾಪತ್ತೆಯಾಗಿರುವ ಶಂಕೆ ವ್ಯಕ್ತವಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಸೇತುವೆ ಕುಸಿದು ಸಂಭವಿಸಿದ ಜೀವಹಾನಿ ತೀವ್ರ ದುಃಖಕರವಾಗಿದೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ.
ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಗಳಿಗೆ ಪಿಎಂಎನ್‌ಆರ್‌ಪಿಎಫ್‌ನಿಂದ 2 ಲಕ್ಷ ರೂ ಗಳ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಪೋಸ್ಟ್ ಮಾಡಿದ್ದಾರೆ.
ಈ ಮಧ್ಯೆ ಸೇತುವೆ ಕುಸಿತ ದುರಂತದಲ್ಲಿ ಸಂಭವಿಸಿದ ಜೀವಹಾನಿಗೆ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ದುಃಖ ವ್ಯಕ್ತಪಡಿಸಿದ್ದು, ಘಟನೆಯ ಬಗ್ಗೆ ತಕ್ಷಣವೇ ತನಿಖೆಗೆ ಆದೇಶ ನೀಡಿದ್ದಾರೆ.





