ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ ಭರ್ಜರಿ ಗೆಲುವು ಸಾಧಿಸಿದೆ.
ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿದ್ದಾರೆ.
ಈ ಬೆನ್ನಲ್ಲೇ ಕಾಂಗ್ರೆಸ್ ಪಕ್ಷವು ಟಿವಿಕೆಗೆ ಬೆಂಬಲ ಘೋಷಿಸಿದರೂ ಇನ್ನೂ ಐದು ಶಾಸಕರು ಬೆಂಬಲ ಅಗತ್ಯವಿದೆ. ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ವಿಜಯ್ ಅವರಿಗೆ ಬಹುಮತ ಸಾಬೀತುಪಡಿಸಿ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದ್ದಾರೆ. ಇದರಿಂದ ಇಂದು ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಕಾರ್ಯಕ್ರಮವನ್ನು ಮುಂದೂಡಿಕೆ ಮಾಡಲಾಗಿದೆ.
ಈ ನಡುವೆ ಇಂದು ಕೂಡ ವಿಜಯ್ ಅವರು ರಾಜ್ಯಪಾಲರನ್ನು ಭೇಟಿ ಮಾಡಿ, 112 ಶಾಸಕರ ಬೆಂಬಲ ಇರುವ ಪತ್ರವನ್ನು ಸಲ್ಲಿಸಿದ್ದಾರೆ.
ಇದಕ್ಕೆ ಒಪ್ಪದ ರಾಜ್ಯಪಾಲರು 118 ಶಾಸಕರ ಬಹುಮತ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಿ, 42 ಗಂಟೆಗಳಲ್ಲಿ ಬಹುಮತ ಸಾಬೀತುಪಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.




