ನವದೆಹಲಿ: ಜನವರಿ 14 ರಿಂದ ಆರಂಭವಾಗಲಿರುವ ರಾಹುಲ್ ಗಾಂಧಿ ನೇತೃತ್ವದ ಮುಂಬೈ-ಮಣಿಪುರ ಯಾತ್ರೆಯನ್ನು ಕಾಂಗ್ರೆಸ್ ಗುರುವಾರ ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿದೆ.
ಈ ಭಾರತ್ ಜೋಡೋ ನ್ಯಾಯ್ ಯಾತ್ರೆ ಅರುಣಾಚಲ ಪ್ರದೇಶ ಸೇರಿದಂತೆ 15 ರಾಜ್ಯಗಳಲ್ಲಿ ಸಾಗಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನವದೆಹಲಿಯ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ನಡೆದ ಪಕ್ಷದ ಪ್ರಧಾನ ಕಾರ್ಯದರ್ಶಿಗಳು, ರಾಜ್ಯ ಉಸ್ತುವಾರಿಗಳು, ರಾಜ್ಯ ಘಟಕದ ಅಧ್ಯಕ್ಷರು ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಸಭೆಯ ನಂತರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ರಾಹುಲ್ ಗಾಂಧಿ ಯಾತ್ರೆಯನ್ನು ‘ಭಾರತ್ ಜೋಡೋ ನ್ಯಾಯ್ ಯಾತ್ರೆ’ ಎಂದು ಮರುನಾಮಕರಣ ಮಾಡಿರುವುದಾಗಿ ಘೋಷಿಸಿದ್ದಾರೆ.
ಇದಕ್ಕು ಮೊದಲು ಭಾರತ್ ನ್ಯಾಯ್ ಯಾತ್ರೆ ಎಂದು ಹೆಸರಿಸಲಾಗಿತ್ತು. ಈ ಯಾತ್ರೆಯಲ್ಲಿ ಭಾಗವಹಿಸುವಂತೆ ಎಲ್ಲಾ ಇಂಡಿಯಾ ಮೈತ್ರಿಕೂಟದ ಎಲ್ಲಾ ನಾಯಕರಿಗೆ ಕಾಂಗ್ರೆಸ್ ಆಹ್ವಾನ ನೀಡಲಾಗುವುದು ಎಂದು ಜೈರಾಮ್ ರಮೇಶ್ ತಿಳಿಸಿದ್ದಾರೆ.
6,713 ಕಿ.ಮೀ.ಗೂ ಹೆಚ್ಚು ದೂರ ಸಾಗುವ ಈ ಯಾತ್ರೆಯು ಬಸ್‌ಗಳಲ್ಲಿ ಹಾಗೂ ಕಾಲ್ನಡಿಗೆಯಲ್ಲಿ ಕ್ರಮಿಸಲಿದೆ. ಈ ಯಾತ್ರೆಯು 110 ಜಿಲ್ಲೆಗಳು, ಸುಮಾರು 100 ಲೋಕಸಭಾ ಕ್ಷೇತ್ರಗಳು ಮತ್ತು 337 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ.