ಲೋಕಸಭೆ ಚುನಾವಣೆ ಸಮೀಸುತ್ತಿದ್ದಂತೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಭೂತ್ ಹಂತದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದ್ದು, ಇದರ ನಡುವೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ.
ಫೆಬ್ರವರಿ 17 ಹಾಗೂ 18ರಂದು ಕಾರ್ಯಕಾರಿಣಿ ಸಭೆಯನ್ನು ಆಯೋಜಿಸಲಾಗಿದ್ದು, ಪ್ರತಿ ರಾಜ್ಯದ ನಾಯಕರನ್ನು ಆಹ್ವಾನಿಸಲಾಗಿದೆ. ದೆಹಲಿಯ ಭಾರತ ಮಂಟಪದಲ್ಲಿ ಈ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಸಭೆಗೆ ಎಲ್ಲಾ ರಾಜ್ಯಗಳ ಬಿಜೆಪಿ ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಮಾಜಿ ಶಾಸಕರು ಹಾಗೂ ಪದಾಧಿಕಾರಿಗಳಿಗೆ ಆಹ್ವಾನ ನೀಡಲಾಗಿದೆ.
ಸಭೆಯ ಮೊದಲ ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಷಣ ಮಾಡಲಿದ್ದು, ಕೊನೆಯ ದಿನ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕಾಯಕಾರಿಣಿ ಸಭೆಯ ಮುನ್ನಾ ದಿನ ರಾಷ್ಟ್ರೀಯ ಪದಾಧಿಕಾರಿಗಳ ಸಭೆ ನಿಗದಿಯಾಗಿದ್ದು, ಪ್ರಧಾನ ಕಾರ್ಯದರ್ಶಿಗಳು, ಕೋಶ ಸಂಚಾಲಕರು, ಎಲ್ಲಾ ಮೋರ್ಚಗಳ ಅಧ್ಯಕ್ಷರು, ಪುರಸಭೆ, ನಗರಸಭೆ, ಜಿಲ್ಲಾ ಪಂಚಾಯಿತಿಗಳ ಸದಸ್ಯರನ್ನು ಆಹ್ವಾನಿಸಲಾಗಿದೆ.