ನವದೆಹಲಿ: ಜಾಮೀನಿಗೆ ತಡೆ ನೀಡಿದ್ದ ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದ್ದು, ಜೂನ್.26ರಂದು ಮತ್ತೊಮ್ಮೆ ವಿಚಾರಣೆ ನಡೆಸಲಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ಒಮ್ಮೆ ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಈ ಹಿಂದೆ ದೆಹಲಿ ನ್ಯಾಯಾಲಯದಲ್ಲಿ ಸಿಎಂ ಕೇಜ್ರಿವಾಲ್‌ಗೆ ಜಾಮೀನು ನೀಡಲಾಗಿತ್ತು. ಆದರೆ ಅವರ ಜಾಮೀನನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಪ್ರಕರಣದ ತುರ್ತು ವಿಚಾರಣೆ ನಡೆದು ಜಾಮೀನು ಆದೇಶದ ಜಾರಿಗೆ ಎರಡು ದಿನಗಳ ಕಾಲ ಮಧ್ಯಂತರ ತಡೆ ನೀಡಲಾಗಿತ್ತು.
ಇದನ್ನು ಮತ್ತೆ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಅವರು, ನಿನ್ನೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಕೇಜ್ರಿವಾಲ್ ಪರ ವಕೀಲ ಈ ಅರ್ಜಿಯನ್ನು ನಾಳೆಯೇ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದ್ದರು. ಆದರೆ ಇಂದು ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದ್ದು, ಕೇಜ್ರಿವಾಲ್‌ಗೆ ನ್ಯಾಯಾಲಯದಲ್ಲಿ ಭಾರೀ ಹಿನ್ನಡೆಯಾಗಿದೆ.