ಭೋಪಾಲ್: ಕೇಂದ್ರದಲ್ಲಿ ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ, ದೇಶದ ಇತರೆ ಹಿಂದುಳಿದ ವರ್ಗಗಳ(ಒಬಿಸಿ) ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶನಿವಾರ ಹೇಳಿದ್ದಾರೆ.
ಮಧ್ಯಪ್ರದೇಶದ ಶಾಜಾಪುರ ಜಿಲ್ಲೆಯ ಕಲಾಪಿಪಾಲ್ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಾವು ಮಾಡುವ ಮೊದಲ ಕೆಲಸವೆಂದರೆ ದೇಶದಲ್ಲಿ ಒಬಿಸಿಗಳ ನಿಖರ ಸಂಖ್ಯೆಯನ್ನು ತಿಳಿಯಲು ಜಾತಿ ಆಧಾರಿತ ಜನಗಣತಿ ನಡೆಸಲಾಗುವುದು. ಈ ಅವರ ನಿಖರ ಸಂಖ್ಯೆ ಯಾರಿಗೂ ಗೊತ್ತಿಲ್ಲ” ಎಂದಿದ್ದಾರೆ.
ಕ್ಯಾಬಿನೆಟ್ ಕಾರ್ಯದರ್ಶಿ ಮತ್ತು ಕಾರ್ಯದರ್ಶಿಗಳು ಸೇರಿದಂತೆ ಕೇವಲ 90 ಅಧಿಕಾರಿಗಳು ಈ ದೇಶವನ್ನು ಆಳುತ್ತಿದ್ದಾರೆ ಎಂದು ಪ್ರತಿಪಾದಿಸಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ, ದೇಶದಲ್ಲಿ ನೀತಿಗಳು ಮತ್ತು ಕಾನೂನುಗಳನ್ನು ರೂಪಿಸುವಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರದ್ದು ಯಾವುದೇ ಪಾತ್ರ ಇಲ್ಲ ಎಂದು ಟೀಕಿಸಿದ್ದಾರೆ.
ಚುನಾಯಿತ ಬಿಜೆಪಿ ಸದಸ್ಯರ ಬದಲಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಮತ್ತು ಅಧಿಕಾರಿಗಳು ಕಾನೂನು ರೂಪಿಸುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಮಧ್ಯಪ್ರದೇಶ ದೇಶದ ಭ್ರಷ್ಟಾಚಾರದ ಕೇಂದ್ರಬಿಂದು ಎಂದು ಟೀಕಿಸಿದ ರಾಹುಲ್ ಗಾಂಧಿ, ವ್ಯಾಪಂನಂತಹ ಹಗರಣಗಳು ರಾಜ್ಯವನ್ನೇ ಬೆಚ್ಚಿಬೀಳಿಸಿದೆ ಎಂದು ವಾಗ್ದಾಳಿ ನಡೆಸಿದರು.