ಶುಶ್ರೂಷಾಧಿಕಾರಿಗಳ ಕೈ ಸೇರದ ಕೋವಿಡ್‌ ಭತ್ಯೆ; ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಣೆ

ಮೈಸೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಕಾಯಂ ಶುಶ್ರೂಷಾಧಿಕಾರಿಗಳಿಗೆ ಕೋವಿಡ್-19ರ ಪ್ರೋತ್ಸಾಹಧನವನ್ನು ಮಂಜೂರುಮಾಡಲು ವಿಳಂಬ ಮಾಡುತ್ತಿರುವುದನ್ನು ಖಂಡಿಸಿ ಬುಧವಾರದಿಂದ  ಕಪ್ಪುಪಟ್ಟಿ ಧರಿಸಿ ಕಾರ್ಯ ನಿರ್ವಹಿಸುವ ಮೂಲಕ ಪ್ರತಿಭಟನೆ ಆರಂಭಿಸಿದರು.

ನಗರದ ಕೆ.ಆರ್.ಆಸ್ಪತ್ರೆ ಎದುರು ಜಮಾಯಿಸಿದ ಶುಶ್ರೂಷಾಧಿಕಾರಿಗಳು ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಏಳು ದಿನಗಳ ಕಾಲ ಕಪ್ಪು ಪಟ್ಟಿ ಧರಿಸಿಕೊಂಡು ಕಾರ್ಯ ನಿರ್ವಹಿಸುವ ಮೂಲಕ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ರಾಜ್ಯಸರ್ಕಾರಿ ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಕಾಯಂ ಶುಶ್ರೂಷಾಧಿಕಾರಿಗಳಿಗೆ ಕೋವಿಡ್-19 ಪ್ರೋತ್ಸಾಹಧನ ಮಂಜೂರು ಮಾಡದೆ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಒಂದು ವರ್ಷದಿಂದ ನಿರಂತರವಾಗಿ ಸರ್ಕಾರಕ್ಕೆ ಮನವಿ ಸಲ್ಲಿಸಿ ಪ್ರತಿಭಟನೆ ನಡೆಸಿದ್ದರೂ ಗಂಭೀರವಾಗಿ ಪರಿಗಣಿಸದೆ ಇರುವುದು ಸರಿಯಲ್ಲ ಎಂದು ಆರೋಪಿಸಿದರು.

ಕೋವಿಡ್ ಮೊದಲನೇ ಮತ್ತು ಎರಡನೇ ಅಲೆಯಲ್ಲಿ ಶುಶ್ರೂಷಾಧಿಕಾರಿಗಳು ತಮ್ಮ ಜೀವದ ಹಂಗು ತೊರೆದು ಕೆಲಸ ನಿರ್ವಹಿಸಿದ್ದಾರೆ. ಇದನ್ನು ಮನಗಂಡು ಪ್ರೋತ್ಸಾಹಧನ ಮಂಜೂರು ಮಾಡಬೇಕಾದ ಇಲಾಖೆ ಅಧಿಕಾರಿಗಳು ತಾಂತ್ರಿಕ ಕಾರಣಗಳನ್ನು ಮುಂದಿಟ್ಟುಕೊಂಡು ವಿಳಂಬ ಮಾಡುತ್ತಿರುವುದರಿಂದ ತುಂಬಾ ತೊಂದರೆಯಾಗಿದೆ ಎಂದು ಕಿಡಿಕಾರಿದರು.