Mysore
20
overcast clouds
Light
Dark

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು ಪ್ರಕರಣ:‌ ಸಿಎಂ, ಡಿಸಿಎಂ, ರಾಹುಲ್‌ ಗಾಂಧಿಗೆ ಕೋರ್ಟ್‌ ಸಮನ್ಸ್‌

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಚಾರದ ರೇಟ್‌ ಕಾರ್ಡ್‌ ಜಾಹೀರಾತು ನೀಡಿದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌ಗೆ ಏಪ್ರಿಲ್‌ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್‌ ನೀಡಿದ್ದರೆ, ರಾಹುಲ್‌ ಗಾಂಧಿಗೆ ಜೂನ್‌ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ಅವರಿಗೆ ಸಮನ್ಸ್‌ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್‌ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚಿಸಿದರೆ, ಸಿಎಂಗೆ ಸಮನ್ಸ್‌ ಜಾರಿ ಮಾಡಲು ಹೈಗ್ರೌಂಡ್ಸ್‌ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂನ್‌ 1ರಂದು ಹಾಜರಾಗಲ ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ರಾಹುಲ್‌ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್‌ ಗಾಂಧಿ ಅವರು ಜೂನ್‌ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾಯಮೂರ್ತಿ ಜೆ.ಪ್ರೀತ್‌ ಅವರು ಆದೇಶಿಸಿದ್ದಾರೆ.

ಜಾಹೀರಾತು ವಿರುದ್ಧ ದೂರ ನೀಡಿದ್ದ ಬಿಜೆಪಿ

ಹಿಂದಿನ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್.‌ ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌, ರಾಹುಲ್‌ ಗಾಂಧಿ ಸೇರಿದಂತೆ ಕೆಪಿಸಿಸಿಯ ಮತ್ತಿತರರನ್ನು ವಿರುದ್ಧ ದೂರು ದಾಖಲು ಮಾಡಲಾಗಿತ್ತು