ಮುಂಜಾನೆಯೇ ಕಳ್ಳರಂತೆ ಬಂದು ಧಾರ್ಮಿಕ ಕಟ್ಟಡ ತೆರವುಗೊಳಿಸ್ತೀರಿ: ಅಧಿಕಾರಿಗಳ ವಿರುದ್ಧ ಪ್ರತಾಪಸಿಂಹ ಗರಂ

ಮೈಸೂರು: ಬೆಳಗಿನ ಜಾವ ಕಳ್ಳರಂತೆ ಬಂದು ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಸುತ್ತಿದ್ದೀರಿ ಎಂದು ಜಿಲ್ಲಾಡಳಿತದ ಅಧಿಕಾರಿಗಳ ವಿರುದ್ಧ ಸಂಸದ ಪ್ರತಾಪಸಿಂಹ ಗರಂ ಆದರು.

ನಗರದಲ್ಲಿ ಭಾನುವಾರ ನೂರೊಂದು ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‌ ಆದೇಶ ಮುಂದಿಟ್ಟುಕೊಂಡು ಮುಂಜಾನೆ ಅಧಿಕಾರಿಗಳು ಕಳ್ಳರಂತೆ ಬಂದು ಜೆಸಿಬಿ, ಹಿಟಾಜಿ ಮೂಲಕ ಧಾರ್ಮಿಕ ಕಟ್ಟಡಗಳನ್ನು ನೆಲಸಮಗೊಳಿಸುತ್ತಿದ್ದಾರೆ. ಎಲ್ಲರೂ ಗಾಢ ನಿದ್ರೆಯಲ್ಲಿರುವ ಸಮಯವನ್ನು ಕಳ್ಳರು ಕಳ್ಳತನಕ್ಕೆ ಪ್ರಶಸ್ತ ಎಂದುಕೊಳ್ಳುತ್ತಾರೆ. ಅವರಂತೆ ಅಧಿಕಾರಿಗಳು ಮುಂಜಾನೆ ಬಂದು ದೇಗುಲಗಳನ್ನು ತೆರವುಗೊಳಿಸುತ್ತಿದ್ದಾರೆ. ಇದು ಸರಿಯಲ್ಲ, ಜನರ ಧಾರ್ಮಿಕ ಭಾವನೆಗಳೊಂದಿಗೆ ಆಟವಾಡಬೇಡಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಧಾರ್ಮಿಕ ಕಟ್ಟಡಗಳ ತೆರವು ಕಾರ್ಯಾಚರಣೆಯನ್ನು ಕೂಡಲೇ ನಿಲ್ಲಿಸಬೇಕು. ಇಲ್ಲದಿದ್ದರೆ ದೇವಸ್ಥಾನಗಳನ್ನು ಉಳಿಸಿ ಜನಾಂದೋಲನವನ್ನು ರಾಜ್ಯಾದ್ಯಂತ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ಅನಧಿಕೃತವಾಗಿ ನಿರ್ಮಿಸಿರುವ ಪ್ರಾರ್ಥನಾ ಮಂದಿರಗಳ ತೆರವಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ನಾನು ಮೈಸೂರಿಗೆ ಮಾತ್ರ ಸೀಮಿತಗೊಳಿಸಿ ಮಾತನಾಡುತ್ತಿಲ್ಲ. ಇಡೀ ದೇಶಕ್ಕೆ ಅನ್ವಯವಾಗುವಂತೆ ಮಾತನಾಡುತ್ತಿದ್ದೇನೆ. ಯಾವುದೇ ಪೂರ್ವಾಪರಗಳನ್ನು ಪರಿಶೀಲಿಸದೇ ಏಕಾಏಕಿ ದೇಗುಲಗಳನ್ನು ನೆಲಸಮಗೊಳಿಸುತ್ತಿರುವುದು ಸರಿಯಲ್ಲ. ಇಂತಹ ಘಟನೆಗಳನ್ನು ಯಾವುದೇ ನಾಗರಿಕ ಸಮಾಜ ಒಪ್ಪುವುದಿಲ್ಲ. ಯಾವುದೇ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವ ಮುನ್ನಾ ಮೊದಲು ಅಲ್ಲಿನ ಸ್ಥಳೀಯ ನಿವಾಸಿಗಳೊಂದಿಗೆ ಚರ್ಚಿಸಬೇಕು ಎಂದು ತಿಳಿಸಿದರು.

ಪ್ರಾರ್ಥನಾ ಮಂದಿರವನ್ನು ಉಳಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿದೆಯೇ? ಅಥವಾ ಸ್ಥಳಾಂತರ ಮಾಡಲು ಸಾಧ್ಯವಿದೆಯೇ? ಎಂಬೆಲ್ಲಾ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳಬೇಕು. ಅನಿವಾರ್ಯ ಪರಿಸ್ಥಿತಿ ಇದ್ದರೆ ಮಾತ್ರ ಅಂತಹ ಪ್ರಾರ್ಥನಾ ಮಂದಿರಗಳನ್ನು ಮಾತ್ರ ಸ್ಥಳೀಯ ನಿವಾಸಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ತೆರವುಗೊಳಿಸಬೇಕೇ ಹೊರತು ಜನರ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ಯಾವುದೇ ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸಬಾರದು ಎಂದು ಹೇಳಿದರು.

× Chat with us