ದುಬೈ : ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಸರಣಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ತಡರಾತ್ರಿ ದೇಶದಾದ್ಯಂತ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.
ಮೈಸೂರು, ಬೆಂಗಳೂರು, ದೆಹಲಿ, ಮುಂಬೈ ಸೇರಿದಂತೆ ಹಲವಾರು ನಗರಗಳಲ್ಲಿ ಅಭಿಮಾನಿಗಳು ಬೀದಿಗಿಳಿದು ಸಂಭ್ರಮಿಸಿದ್ದಾರೆ.
ಇನ್ನೂ ಕೆಲವು ನಗರಗಳಲ್ಲಿ ತ್ರಿವರ್ಣ ಧ್ವಜ ಹಿಡಿದು ಬೀದಿಗಿಳಿದ ಅಭಿಮಾನಿಗಳು ʼಭಾರತ್ ಮಾತಾಕೀ ಜೈʼ ಎನ್ನುವ ಘೋಷಣೆ ಮೊಳಗಿಸಿ ಇತರರನ್ನು ಹುರಿದುಂಬಿಸಿದ್ದಾರೆ.
ಭಾರತ 12 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. ಅಜೇಯವಾಗಿ ಫೈನಲ್ ಪ್ರವೇಶಿಸಿದ ಟೀಂ ಇಂಡಿಯಾ, ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳ ಜಯಭೇರಿ ಸಾಧಿಸಿದೆ.
ಹೊಸದಿಲ್ಲಿಯ ಇಂಡಿಯಾ ಗೇಟ್ ಬಳಿಯೂ ಅಭಿಮಾನಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.





