ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆ ಮಾಡಿರುವ ಟೆಸ್ಟ್ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಉಪನಾಯಕ ಹಾಗೂ ಬಲಗೈ ವೇಗಿ ಜಸ್ಪ್ರೀತ್ ಬುಮ್ರಾ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ.
ಅಲ್ಲದೇ ಐಸಿಸಿ ರ‍್ಯಾಂಕಿಂಗ್‌ನಲ್ಲಿ ಗರಿಷ್ಟ ರೇಟಿಂಗ್ ಪಾಯಿಂಟ್ ಗಳಿಸುವ ಮೂಲಕ ಭಾರತದ ಮಾಜಿ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಜಸ್ಪ್ರೀತ್ ಬುಮ್ರಾ ಉತ್ತಮ ಬೌಲಿಂಗ್ ಪ್ರದರ್ಶನ ಮಾಡುವ ಮೂಲಕ 21 ವಿಕೆಟ್ ಪಡೆದಿದ್ದಾರೆ. ಈ ಮೂಲಕ 904 ರೇಟಿಂಗ್ ಪಾಯಿಂಟ್ಸ್‌ಗಳೊಂದಿಗೆ ಮೊದಲ ಸ್ಥಾನ ಅಲಂಕರಿಸಿದ್ದಾರೆ.
ಈ ಮೊದಲು ಭಾರತೀಯ ಬೌಲರ್‌ಗಳ ಪೈಕಿ ರವಿಚಂದ್ರನ್ ಅಶ್ವಿನ್ 2016ರ ಡಿಸೆಂಬರ್‌ನಲ್ಲಿ ಇದೇ ಸಾಧನೆ ಮಾಡಿದ್ದರು.
ಇನ್ನುಳಿದಂತೆ ಬೌಲರ್‌ಗಳ ರ‍್ಯಾಂಕಿಂಗ್ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿ ದಕ್ಷಿಣ ಆಫ್ರಿಕಾದ ಕಗಿಸೊ ರಬಾಡ (856) ಹಾಗೂ ಆಸ್ಟ್ರೇಲಿಯಾದ ಜೋಶ್ ಹ್ಯಾಜಲ್‌ವುಡ್ ಮೂರನೇ (852) ಸ್ಥಾನದಲ್ಲಿದ್ದಾರೆ.





