ತುಮಕೂರು: ಶೀಘ್ರದಲ್ಲೇ ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಬಿಡುಗಡೆ ಮಾಡುತ್ತೇವೆ ಎಂದು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಈ ಕುರಿತು ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸೆಪ್ಟೆಂಬರ್ ಹಾಗೂ ಅಕ್ಟೋಬರ್ ತಿಂಗಳ ಗೃಹಲಕ್ಷ್ಮೀ ಹಣ ಇನ್ನೂ ಬಿಡುಗಡೆಯಾಗಿಲ್ಲ. ಆದಷ್ಟು ಬೇಗ ಬಿಡುಗಡೆ ಮಾಡುತ್ತೇವೆ. ನಮ್ಮ ಗೃಹಲಕ್ಷ್ಮೀಯನ್ನು ಕಾಪಿ ಮಾಡಿಕೊಂಡು ಬಿಜೆಪಿಯವರು ಎಲ್ಲಾ ಕಡೆ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.
ಇನ್ನು ಅಕ್ಕಪಡೆ ಬಗ್ಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ಹಾಗೂ ನಮ್ಮ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಅಕ್ಕಪಡೆ ಕಾರ್ಯನಿರ್ವಹಿಸುತ್ತದೆ.
ಪ್ರತಿ ಜಿಲ್ಲೆಯಲ್ಲೂ ಅದರಲ್ಲೂ ನಗರ ಕೇಂದ್ರಗಳಲ್ಲಿ 10 ಮಹಿಳೆಯರು ಇರುತ್ತಾರೆ. ಅವರ ಜೊತೆಗೆ ಇಬ್ಬರು ಮಹಿಳಾ ಪೊಲೀಸರು ಸಹ ಇರುತ್ತಾರೆ. ಶಾಲೆ, ಕಾಲೇಜುಗಳು, ಬಸ್ ನಿಲ್ದಾಣ ಸೇರಿದಂತೆ ಜನಸಂದಣಿ ಪ್ರದೇಶ, ಮಹಿಳಾ ಹಾಸ್ಟೆಲ್‌ಗಳು, ಪಾರ್ಕ್, ದೇವಸ್ಥಾನ, ಮನೆ, ಜನವಸತಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಹೇಳಿದರು.





