Mysore
29
clear sky

Social Media

ಗುರುವಾರ, 29 ಜನವರಿ 2026
Light
Dark

ಸಾಮಾಜಿಕ ಬಹಿಷ್ಕಾರ ಹಾಕಿದ್ರೆ 3 ವರ್ಷ ಜೈಲು ಜೊತೆಗೆ ದಂಡ : ಮಸೂದೆ ಮಂಡಿಸಿದ ರಾಜ್ಯ ಸರ್ಕಾರ 

ಬೆಳಗಾವಿ : ಅನಿಷ್ಟ ಪದ್ಧತಿಯಾಗಿ ಇನ್ನೂ ಉಳಿದುಕೊಂಡಿರುವ ಸಾಮಾಜಿಕ ಬಹಿಷ್ಕಾರ ನಿಷೇಧಕ್ಕೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ, ವಿಧಾನಸಭೆಯಲ್ಲಿ ಕರ್ನಾಟಕ ಸಾಮಾಜಿಕ ಬಹಿಷ್ಕಾರದಿಂದ ಜನರ ರಕ್ಷಣೆ (ತಡೆ, ನಿಷೇಧ ಮತ್ತು ಪರಿಹಾರ) ಮಸೂದೆಯನು ಗುರುವಾರ ಮಂಡಿಸಲಾಗಿದೆ.

ಈ ಮಸೂದೆ ಅನ್ವಯ ಇನ್ಮುಂದೆ ಯಾವುದೇ ವ್ಯಕ್ತಿ, ಕುಟುಂಬ ಅಥವಾ ಕುಟುಂಬದ ಸದಸ್ಯರನ್ನು ಸಾಮಾಜಿಕವಾಗಿ ಬಹಿಷ್ಕರಿಸಿದರೆ, 1 ಲಕ್ಷ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಬಹಿಷ್ಕಾರ ಹಾಕುವ ಬಗ್ಗೆ ಸಭೆ–ಪಂಚಾಯಿತಿ ನಡೆಸುವುದು, ಬಹಿಷ್ಕಾರಕ್ಕೆ ಸಹಾಯ, ಪ್ರಚೋದನೆ ಕೊಡುವುದು ಶಿಕ್ಷಾರ್ಹ ಅಪರಾಧವಾಗಲಿದೆ.

ನ್ಯಾಯಾಧೀಶರಿಗೆ ನೇರವಾಗಿ ದೂರು

ಬಹಿಷ್ಕಾರಕ್ಕೆ ಒತ್ತಡ ಹೇರುವ ಮೂಲಕ ನಿರ್ಧಾರಕ್ಕೆ ಕಾರಣರಾದವರು, ಬಹಿಷ್ಕಾರದ ಪರವಾಗಿ ಮತ ಹಾಕಿದವರು ಅಥವಾ ಚರ್ಚೆಯಲ್ಲಿ ಪಾಲ್ಗೊಂಡವರನ್ನೂ ಅಪರಾಧಿಗಳೆಂದು ನಿರ್ಧರಿಸಲಾಗುತ್ತದೆ. ಈ ಕುರಿತು ಸಭೆ, ಜಮಾವಣೆ, ಸಮಾವೇಶ ನಡೆಸುವುದು ಅಕ್ರಮ ಎಂದು ಮಸೂದೆಯಲ್ಲಿ ಉಲ್ಲೇಖಿಸಿದೆ. ಬಹಿಷ್ಕಾರಕ್ಕೆ ಒಳಗಾಗುವವರು ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದು.

ಪ್ರಥಮ ದರ್ಜೆ ನ್ಯಾಯಾಧೀಶರಿಗೆ ವಿಚಾರಣೆಯ ಅಧಿಕಾರ ನೀಡಲಾಗಿದೆ. ನೇರವಾಗಿ ಸಲ್ಲಿಕೆಯಾದ ದೂರಿನ ತನಿಖೆ ನಡೆಸುವಂತೆ ನ್ಯಾಯಾಧೀಶರು ಆದೇಶಿಸಬಹುದು. ಪೀಡಿತರಿಗೆ ಸಹಾಯ ಒದಗಿಸಲು ಸೂಚಿಸಬಹುದು. ದಂಡದ ಮೊತ್ತವನ್ನು ಪೀಡಿತರಿಗೆ ಪರಿಹಾರವಾಗಿ ನೀಡಲು ನಿರ್ದೇಶನ ನೀಡಬಹುದು. ಡಿಸಿಗಳಿಗೂ ಕೆಲ ಅಧಿಕಾರ ಕೊಡಲಾಗಿದೆ. ಇನ್ನು ಸಾಮಾಜಿಕ ಬಹಿಷ್ಕಾರ ತಡೆಗೆ ಅಧಿಕಾರಿಗಳನ್ನು ನಿಯೋಜಿಸಲು ಮಸೂದೆಯಲ್ಲಿ ಅವಕಾಶ ಕೊಡಲಾಗಿದೆ.

ಯಾವುದೆಲ್ಲ ನಿಷೇಧ?

* ಗ್ರಾಮ ಅಥವಾ ಸಮುದಾಯದಿಂದ ಹೊರ ಹಾಕುವುದು

* ಧಾರ್ಮಿಕ, ಸಾರ್ವಜನಿಕ ಸ್ಥಳಗಳ ಬಳಕೆಗೆ ನಿರ್ಬಂಧ

* ಪೂಜಾ ಸ್ಥಳಗಳ ಪ್ರವೇಶಕ್ಕೆ ಅಡ್ಡಿ ಮಾಡುವುದು

* ಸಾಮಾಜಿಕ–ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವುದಕ್ಕೆ ತಡೆಯೊಡ್ಡುವುದು

* ವ್ಯವಹಾರ ಅಥವಾ ಉದ್ಯೋಗ ತಿರಸ್ಕಾರ ಮಾಡುವುದು

* ಶಾಲೆ, ಆಸ್ಪತ್ರೆ, ಸಮುದಾಯ ಭವನಗಳ ಪ್ರವೇಶಕ್ಕೆ ತಡೆಯೊಡ್ಡುವುದು

* ವಿವಿಧ ಸೇವೆಗಳು, ಅವಕಾಶಗಳನ್ನು ನಿರಾಕರಿಸುವುದು

* ಮದುವೆ, ಅಂತ್ಯಕ್ರಿಯೆಗಳಲ್ಲಿ ಭಾಗವಹಿಸು ವುದಕ್ಕೆ ತಡೆಯೊಡ್ಡುವುದು

* ವ್ಯಾಪಾರ, ಸಾಮಾಜಿಕ ಸಂಬಂಧಗಳಿಗೆ ತಡೆಯೊಡ್ಡುವುದು

* ಮಕ್ಕಳನ್ನು ಒಟ್ಟಿಗೆ ಆಡಲು ಅಡ್ಡಿ ಪಡಿಸುವುದು

* ಮಾನವ ಹಕ್ಕುಗಳನ್ನು ನಿರಾಕರಿಸುವುದು

* ಲಿಂಗತ್ವ, ವರ್ಣ, ಬಟ್ಟೆ, ಭಾಷೆ, ಸಾಂಸ್ಕೃತಿಕ ಭೇದ ಎಸಗುವುದು.

Tags:
error: Content is protected !!