ಬೆಂಗಳೂರು: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್(ಪಿಎಸ್‌ಐ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯು ಪ್ರಕಟಗೊಂಡಿದೆ.
ಗೃಹ ಇಲಾಖೆ ಸೋಮವಾರ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿದ್ದು, ಅಭ್ಯರ್ಥಿಗಳಲ್ಲಿ ಸಂತಸ ಮೂಡಿಸಿದೆ.
ಮೊದಲಿಗೆ ಪೊಲೀಸ್ ನೇಮಕಾತಿ ಮಂಡಳಿ ನಡೆಸಿದ್ದ ಪರೀಕ್ಷೆಯಲ್ಲಿ ಅಕ್ರಮ ನಡೆದಿತ್ತು. ಈ ಬಗ್ಗೆ ಹೈಕೋರ್ಟ್ ಆದೇಶದಂತೆ ರಾಜ್ಯ ಸರ್ಕಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಮರು ಪರೀಕ್ಷೆ ನಡೆಸಿತ್ತು. ಬಳಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಗೃಹ ಇಲಾಖೆಗೆ ಸಲ್ಲಿಸಿತ್ತು. ಆದರೆ, ಹೈದರಾಬಾದ್-ಕರ್ನಾಟಕ ಅಭ್ಯರ್ಥಿಗಳಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ಗೊಂದಲ ಉಂಟಾದ ಕಾರಣ ಆಯ್ಕೆ ಪಟ್ಟಿ ಪ್ರಕಟವಾಗಿರಲಿಲ್ಲ.
ಅಭ್ಯರ್ಥಿಗಳಿಗೆ ಮೀಸಲಾತಿ ಅನುಗುಣವಾಗಿ 2023ರ ಫೆ.1ರಂದು ಹೊರಡಿಸಿದ್ದ ಸುತ್ತೋಲೆಯಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಲಾಖೆ ಸಿದ್ಧಪಡಿಸಿದೆ. ಅಲ್ಲದೆ, 2020ರ ಜೂನ್ 6 ರ ಸುತ್ತೋಲೆಯ ಅನ್ವಯ ಆಯ್ಕೆ ಪಟ್ಟಿಯಿಂದ ಹೊರಗುಳಿಯುವ 40ಕಲ್ಯಾಣ ಕರ್ನಾಟಕ ವೃಂದದ ಅಭ್ಯರ್ಥಿಗಳಿಗೆ ಅನುಗುಣವಾಗಿ 40 ಹುದ್ದೆಗಳನ್ನು ಕಲ್ಯಾಣ ಕರ್ನಾಟಕ ವೃಂದದಲ್ಲಿ ಕಾಯ್ದಿರಿಸಿ ಈ ಪಟ್ಟಿಯನ್ನು ಪ್ರಕಟಿಸಲಾಗಿದೆ.
ಅಲ್ಲದೆ, ಈ ಆಯ್ಕೆ ಪಟ್ಟಿಯು ಹೈಕೋರ್ಟ್‌ನ ವಿಚಾರಣಾ ಹಂತದಲ್ಲಿರುವ ರಿಟ್ ಅರ್ಜಿಯ ಅಂತಿಮ ತೀರ್ಪಿಗೆ ಒಳಪಟ್ಟಿದೆ ಎಂದು ಗೃಹ ಇಲಾಖೆ ಹೇಳಿದೆ.





