ರಾಜ್ಯ

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧುಬಂಗಾರಪ್ಪ ವಿಧಾನಸಭೆಗೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರ ಪರವಾಗಿ ಶಾಸಕ ಭೈರತಿ ಬಸವರಾಜು ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಒಟ್ಟು 46,755 ಶಾಲೆಗಳಿದ್ದು, 1,65,618 ಶಿಕ್ಷಕರ ಕಾರ್ಯನಿರತ ಹುದ್ದೆಗಳಿವೆ. ಪ್ರಾಥಮಿಕ ಶಿಕ್ಷಣದಲ್ಲಿ 50,067 ಹಾಗೂ ಪ್ರೌಢಶಾಲೆಗಳಲ್ಲಿ 9,705 ಹುದ್ದೆಗಳು ಖಾಲಿ ಇವೆ. ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಈಗಾಗಲೇ 13,500 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಂಡಿದ್ದು, 12,000 ಶಿಕ್ಷಕರ ನೇಮಕ ಮಾಡಲಾಗಿದೆ. 700 ಶಿಕ್ಷಕರ ನೇಮಕದ ವಿಚಾರ ಸುಪ್ರೀಂಕೋರ್ಟ್ ನಲ್ಲಿ ಬಾಕಿ ಇದೆ. ಕಲ್ಯಾಣ ಕರ್ನಾಟಕದಲ್ಲಿ 5,300 ಶಿಕ್ಷಕರನ್ನು ನೇಮಕ ಮಾಡುವ ಪ್ರಕ್ರಿಯೆ ಶುರು ಮಾಡಲಾಗಿದೆ ಎಂದರು.

ಹಿಂದಿನ ಸರ್ಕಾರದಲ್ಲಿ ಮೂರೂವರೆ ವರ್ಷದಲ್ಲಿ 4,500 ಶಿಕ್ಷಕರನ್ನು ಮಾತ್ರ ನೇಮಕ ಮಾಡಲಾಗಿತ್ತು. ಅನುದಾನಿತ ಶಾಲೆಗಳ ಶಿಕ್ಷಕರ ನೇಮಕಾತಿಗೂ ಅವಕಾಶ ಕಲ್ಪಿಸಲಾಗಿದೆ. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ 20 ಶಿಕ್ಷಕರ ಕೊರತೆಯಿದ್ದು, ಅತಿಥಿ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಕಳೆದ ಮೂರು ವರ್ಷಗಳಲ್ಲಿ 20 ಕೊಠಡಿಗಳ ನಿರ್ಮಾಣಕ್ಕೆ 278 ಲಕ್ಷ ರೂ. ಮಂಜೂರಾಗಿದ್ದು, ಈಗಾಗಲೇ 241.19 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಹೇಳಿದರು.

ಬಿಜೆಪಿ ಶಾಸಕ ಬಿ.ಸಿ.ಪಾಟೀಲರ ಪರವಾಗಿ ಶಾಸಕ ವಿ.ಸುನೀಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪದವಿ ಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಅತಿಥಿ ಶಿಕ್ಷಕರ ಪ್ರತಿಭಟನಾ ಸ್ಥಳಕ್ಕೆ ಭೇಟಿ ಕೊಟ್ಟು ಮನವಿ ಸ್ವೀಕರಿಸಲಾಗಿದೆ. ಗೌರವಧನದ ಹೆಚ್ಚಳದ ಬೇಡಿಕೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದೆ. ಮಾಸಿಕ 30 ಸಾವಿರ ರೂ.ಗೆ ಗೌರವಧನ ಹೆಚ್ಚಳ ಮಾಡುವುದು ಕಷ್ಟ. ಈ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದು ಹೆಚ್ಚಳ ಮಾಡಲು ಕೋರಲಾಗುವುದು ಎಂದಾಗ ಸುನೀಲ್ ಕುಮಾರ್, ನೀವು ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಮಗ. ಬಂಗಾರಪ್ಪ ಅವರು ದಿಟ್ಟತನದಿಂದ ಯೋಜನೆಗಳನ್ನು ಅನುಷ್ಠಾನಕ್ಕೆ ತರುತ್ತಿದ್ದರು. ಅದರಂತೆ ನೀವು ಉತ್ತರ ಕೊಡಬೇಕು ಎಂದಾಗ ಬಂಗಾರಪ್ಪ ಅವರ ರೀತಿಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಉತ್ತರ ಮುಂದುವರೆಸಿದ ಸಚಿವರು, ಅತಿಥಿ ಉಪನ್ಯಾಸಕರಿಗೆ ಗೌರವಧನ ಮಾಸಿಕ 9 ಸಾವಿರದಿಂದ 12 ಸಾವಿರಕ್ಕೆ ಹೆಚ್ಚಿಸಲಾಗಿದೆ. ಅತಿಥಿ ಉಪನ್ಯಾಸಕರಿಗೆ ವಾರದಲ್ಲಿ 10 ಗಂಟೆಗಳ ಕಾರ್ಯಭಾರವನ್ನು ನಿಗದಿಪಡಿಸಲಾಗಿದೆ ಎಂದರು.

ಮಧ್ಯಪ್ರವೇಶಿಸಿದ ಸಭಾಧ್ಯಕ್ಷ ಯು.ಟಿ.ಖಾದರ್, ಅತಿಥಿ ಉಪನ್ಯಾಸಕರ ವೇತನ ಹೆಚ್ಚಳವಾಗಬೇಕು. ಅವರ ಟೆನ್ಷನ್ ಕಡಿಮೆ ಮಾಡಬೇಕು. ಇದಕ್ಕೆ ಶೀಘ್ರ ಪರಿಹಾರ ಕಂಡುಕೊಳ್ಳಿ ಎಂದು ಸಲಹೆ ಮಾಡಿದರು.

ವಿರೋಧ ಪಕ್ಷದ ನಾಯಕ ಆರ್.ಅಶೊಕ್ ಮಾತನಾಡಿ, ಕನಿಷ್ಠ ವೇತನ 18 ಸಾವಿರ ರೂ. ಇದೆ. ಅದಕ್ಕೂ ಕಡಿಮೆ ಗೌರವಧನ ಅತಿಥಿ ಉಪನ್ಯಾಸಕರಿಗೆ ನೀಡಲಾಗುತ್ತಿದೆ. ಈಗಾಗಲೇ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಲಾಗಿದೆ. ಇವರಿಗೂ ಹೆಚ್ಚಿಸಬೇಕು. ಪ್ರತಿತಿಂಗಳು ಗೌರವಧನ ನೀಡುವ ಮೂಲಕ ಗೌರವಯುತವಾಗಿ ಬದುಕಲು ಅವಕಾಶ ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಸಚಿವರು, ಸಕಾಲಕ್ಕೆ ಅತಿಥಿ ಉಪನ್ಯಾಸಕರ ಗೌರವಧನ ನೀಡಲಾಗುವುದು ಎಂದರು.

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ 173 ಸರ್ಕಾರಿ ಶಾಲೆಗಳಿದ್ದು, 88 ಶಾಲೆಗಳ 200 ಕೊಠಡಿಗಳು ಶಿಥಿಲಗೊಂಡಿವೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಪ್ರಶ್ನೆಗೆ ಸಚಿವ ಮಧುಬಂಗಾರಪ್ಪ ಉತ್ತರಿಸಿದರು. ಶಾಲಾ ಕಟ್ಟಡಗಳ ದುರಸ್ತಿ ಕಾಮಗಾರಿಗಳಿಗೆ ಕಳೆದ ಮೂರು ವರ್ಷಗಳಲ್ಲಿ ವಿವಿಧ ಯೋಜನೆಗಳಡಿ 56 ಶಾಲೆಗಳ 74 ಕೊಠಡಿಗಳ ದುರಸ್ಥಿ ಕಾಮಗಾರಿಗೆ 174.21 ಲಕ್ಷ ರೂ. ಅನುದಾನ ಮಂಜೂರಾಗಿದೆ ಎಂದರು.

ಜಿ.ಟಿ.ದೇವೇಗೌಡರು ಮಾತನಾಡಿ, ನೂರಾರು ವರ್ಷದ ಶಾಲಾ ಕಟ್ಟಡ ದುರಸ್ತಿಯಾಗಿಲ್ಲ. ಮರದ ಕೆಳಗೆ ಶಾಲೆಗಳು ನಡೆಯುತ್ತಿವೆ. ಕನಿಷ್ಠ 10 ಲಕ್ಷ ರೂ. ನೀಡಬೇಕು. ಆಯಾ ಕ್ಷೇತ್ರದಲ್ಲಿರುವ ಕೈಗಾರಿಕೆಗಳು ಸಿಎಂಆರ್‌ ಹಣವನ್ನು ನೀಡಬೇಕು ಎಂದು ಹೇಳಿದರು.

ಆಗ ಮಧ್ಯಪ್ರವೇಶಿಸಿದ ಸಭಾಧ್ಯಕ್ಷರು, ಸಿಎಂಆರ್ ನಿಧಿ ಹೆಚ್ಚು ಬಳಕೆಯಾಗಬೇಕು. ಶಾಸಕರಿಗೂ ಜವಾಬ್ದಾರಿ ಇದೆ. ವಿಶೇಷ ನಿಧಿ ಅನುದಾನವನ್ನು ಶಾಲೆಗಳ ಕಟ್ಟಡ ನಿರ್ಮಾಣಕ್ಕೆ ನೀಡಬೇಕೆಂಬ ಸಲಹೆ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

7 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

8 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

8 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

8 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

9 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

9 hours ago