ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ಹಲವು ಕಡೆ ಭಾರೀ ಶೀತಗಾಳಿ ಮುಂದುವರೆಯಲಿದ್ದು, ಬೀದರ್, ಕಲಬುರ್ಗಿ, ವಿಜಯಪುರ, ಧಾರವಾಡ ಜಿಲ್ಲೆಗಳಿಗೆ ಹವಾಮಾಣ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಬೆಳಗಾವಿ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಗದಗ, ಹಾವೇರಿ, ಬಳ್ಳಾರಿ ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಲಿದೆ ಎನ್ನಲಾಗಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದ್ದು, ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.





