ಶಿವಮೊಗ್ಗ: ಮಹಿಳೆಗೆ ಮದುವೆ ಆಗುವುದಾಗಿ ನಂಬಿಸಿ ವಂಚಿಸಿದ ಆರೋಪದ ಮೇಲೆ ಶಿವಮೊಗ್ಗ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಗ್ವೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಈ ಹಿಂದೆಯೇ ಸಾಗರದಲ್ಲಿ ಮಹಿಳೆಯೋರ್ವರಿಗೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಆರೋಪದಡಿ ಅರುಣ್ ಕುಗ್ವೆ ವಿರುದ್ಧ ದೂರು ನೀಡಲಾಗಿತ್ತು. ಕಾರಣಾಂತರಗಳಿಂದ ಠಾಣೆಯಲ್ಲಿ ದೂರು ದಾಖಲಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ಮಹಿಳೆ ಶಿವಮೊಗ್ಗ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರು ದಾಖಲಿಸಿಕೊಂಡ ಪೊಲೀಸರು ಸಾಗರದ ನಿವಾಸದಲ್ಲಿ ಆರೋಪಿ ಅರುಣ್‌ನನ್ನು ಬಂಧಿಸಿದ್ದಾರೆ.
ಅರುಣ್ ಕುಗ್ವೆ ಕಳೆದ ನಾಲ್ಕು ವರ್ಷಗಳಿಂದ ಸಂಬಂಧ ಬೆಳೆಸಿ ನನ್ನೊಂದಿಗೆ ಸಂಪರ್ಕ ಬೆಳೆಸಿದ್ದ. ನಂತರ ಬಲಾತ್ಕಾರವಾಗಿ ವಿಡಿಯೋ ಹಾಗೂ ಫೋಟೋ ತೆಗೆದುಕೊಂಡಿದ್ದಾನೆ.
ಇತ್ತೀಚೆಗೆ ಬೇರೆ ಹುಡುಗಿಯರೊಂದಿಗೆ ಇದೇ ರೀತಿ ವರ್ತಿಸಿದ್ದು ಕಂಡು ಬಂದಾಗ ಆ ಬಗ್ಗೆ ಕೇಳಿದ್ದಕ್ಕೆ ಜೀವ ಬೆದರಿಕೆ ಒಡ್ಡಿದ್ದಾನೆ. ಇದಲ್ಲದೇ ಬೇರೆ ಯುವತಿ ಜೊತೆ ಈಗ ಮದುವೆ ನಿಶ್ಚಯ ಮಾಡಿಕೊಂಡಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅರುಣ್ ಕುಗ್ವೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನನ್ನು ವಿಚಾರಣೆ ನಡೆಸುತ್ತಿದ್ದಾರೆ.