ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್ ಸೇರಿದಂತೆ ಇನ್ನಿತರ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿರುವ ಆದೇಶವನ್ನು ಪ್ರಶ್ನಿಸಿ ಶೀಘ್ರವೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಡಿಸೆಂಬರ್.17) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಬೆಂಗಳೂರು ಪೊಲೀಸರು ಜಾಮೀನು ಆದೇಶವನ್ನು ಪ್ರಶ್ನಿಸಲು ಸಿದ್ಧತೆ ನಡೆಸುತ್ತಿದ್ದು, ಶೀಘ್ರವೇ ದರ್ಶನ್ ವಿರುದ್ಧ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಈ ಹಿಂದೆ ಹೈಕೋರ್ಟ್‌ನ ಏಕಸದಸ್ಯ ಪೀಠದಿಂದ ಆರೋಪಿ ದರ್ಶನ್‌ಗೆ ಅನಾರೋಗ್ಯ ವಿಚಾರವಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿತ್ತು. ಈ ಆದೇಶವನ್ನು ಸುಪ್ರೀಂನಲ್ಲಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ರಾಜ್ಯ ಗೃಹ ಸಚಿವಾಲಯದಿಂದ ಅನುಮತಿ ಪಡೆಯಲಾಗಿತ್ತು. ಅದಕ್ಕೆ ಸಚಿವಾಲಯದಿಂದ ಅನುಮತಿ ನೀಡಿದ ಬೆನ್ನಲ್ಲೇ ಬೆಂಗಳೂರು ನಗರ ಪೊಲೀಸರು ಚಾರ್ಜ್‌ಶೀಟ್ ಪ್ರತಿಗಳನ್ನು ಕನ್ನಡದಿಂದ ಇಂಗ್ಲೀಷ್‌ಗೆ ಭಾಷಾಂತರ ಮಾಡುವ ಪ್ರಕ್ರಿಯೆ ನಡೆಸುತ್ತಿದ್ದರು. ಆದರೆ ಈಗ ಎಲ್ಲಾ ಪ್ರಕ್ರಿಯೆಗಳು ಮುಗಿದಿವೆ ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್‌ಗೆ ಮಧ್ಯಂತರ ಜಾಮೀನು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸುವ ಮೊದಲೇ ಹೈಕೋರ್ಟ್‌ನಿಂದ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಹೀಗಾಗಿ ಬೆಂಗಳೂರು ನಗರ ಪೊಲೀಸರು ಇವೆರಡೂ ವಿಚಾರದ ಜಾಮೀನು ಆದೇಶವನ್ನು ಪ್ರಶ್ನಿಸಿ ಶೀಘ್ರದಲ್ಲೇ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದ್ದಾರೆ.





