ಬೆಂಗಳೂರು: ರಾಜ್ಯದ ಬಿಜೆಪಿ ನೂತನ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಲಾಗಿದೆ. ಬೇರೆಬೇರೆ ಸಮಾಜಗಳು, ಪಂಗಡಗಳು, ಮುಂಬೈ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಎಲ್ಲ ಭಾಗಗಳನ್ನು ಗುರುತಿಸಿ ಪದಾಧಿಕಾರಿಗಳ ಆಯ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹೆಚ್ಚೆಚ್ಚು ಯುವಕರಿಗೆ ಆದ್ಯತೆ ಕೊಡಲಾಗಿದೆ. ಹಿರಿಯರಿಗೂ ಅವಕಾಶವನ್ನು ಪಕ್ಷ ಮಾಡಿಕೊಟ್ಟಿದೆ. ಇದರ ಉದ್ದೇಶ ಒಂದೇ ಆಗಿದೆ. ನಮ್ಮ ಮುಂದೆ ದೊಡ್ಡ ಸವಾಲಿದೆ. ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್ ವಿರುದ್ಧ ಹೋರಾಟ ಮಾಡುವುದು ಹಾಗೂ ಮುಂದಿನ ಲೋಕಸಭಾ ಚುನಾವಣೆಯನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷ ಒಂದಾಗಿ ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲೂ ಜಯಭೇರಿ ಬಾರಿಸುವ ಮೂಲಕ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಜಿ ಅವರಿಗೆ ಬಲ ತುಂಬುವ ಕಾರ್ಯ ಮಾಡಬೇಕಿದೆ ಎಂದು ತಿಳಿಸಿದರು.
ನಾಡಿದ್ದು, ಮಂಗಳವಾರ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಎಲ್ಲ ನೂತನ ಪದಾಧಿಕಾರಿಗಳ ಸಭೆ ಕರೆದಿದ್ದೇನೆ. ಮುಂದಿನ ಲೋಕಸಭಾ ಚುನಾವಣೆ ವರೆಗೆ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆಯೇ ಇಲ್ಲ. ನಾವೆಲ್ಲರೂ ಒಗ್ಗಟ್ಟಾಗಿ, ಒಂದಾಗಿ ಪಕ್ಷದ ಸಂಘಟನೆಗೆ ಬಲ ತುಂಬಬೇಕೆಂಬ ಸಂದೇಶ ಕೊಡಲಿದ್ದೇನೆ ಎಂದು ಹೇಳಿದರು.