Mysore
25
haze

Social Media

ಭಾನುವಾರ, 21 ಡಿಸೆಂಬರ್ 2025
Light
Dark

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ಕಾನೂನು ವ್ಯವಸ್ಥೆ ಹಾಳಾಗಿದ್ದು, ಸಂಪೂರ್ಣವಾಗಿ ನೆಲಕಚ್ಚಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ. ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರೀಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು ಬಿಜೆಪಿ ಪಕ್ಷ ಅತ್ಯುಗ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.

ನಾಗರೀಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ. ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯೂ ನಾಗರೀಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

Tags:
error: Content is protected !!