ಬೆಂಗಳೂರು: ಕರ್ನಾಟಕ ಎಂದರೆ ಸಂಸ್ಕೃತಿ, ಸಂಸ್ಕಾರ ಹಾಗೂ ಸುರಕ್ಷತೆಗೆ ಖ್ಯಾತಿ ಪಡೆದಿದ್ದು, ಆದರೆ ಇಂದು ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣವೆಂಬ ಖ್ಯಾತಿಗೆ ಒಳಗಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಸಂಸ್ಕೃತಿ, ಸಂಸ್ಕಾರ, ಸುರಕ್ಷತೆ ಎಂದರೆ ಕರ್ನಾಟಕ ಎಂಬ ಖ್ಯಾತಿ ಪಡೆದಿದ್ದ ನಮ್ಮ ರಾಜ್ಯ ದರೋಡೆಕೋರರು ಹಾಗೂ ಅತ್ಯಾಚಾರಿಗಳ ತಾಣ ಎಂಬ ಕುಖ್ಯಾತಿಗೆ ಒಳಗಾಗುತ್ತಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ ಎಂದಿದ್ದಾರೆ.
ರಾಜಧಾನಿ ಬೆಂಗಳೂರಿನ ಕೆ.ಆರ್.ಮಾರುಕಟ್ಟೆ ಬಳಿ ಬಸ್ಸಿಗಾಗಿ ಕಾಯುತ್ತಿದ್ದ ಒಬ್ಬಂಟಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಹಾಗೂ ದರೋಡೆ ನಡೆದಿರುವ ವರದಿ ಅತ್ಯಂತ ಹೇಯ ಹಾಗೂ ಅಮಾನವೀಯ ಘಟನೆಯಾಗಿದ್ದು ಸ್ತ್ರೀ ಕುಲಕ್ಕೆ ರಕ್ಷಣೆ ನೀಡಲು ಸಾಧ್ಯವಾಗದ ಪರಿಸ್ಥಿತಿಗೆ ರಾಜ್ಯದ ಕಾನೂನು ಸುವ್ಯವಸ್ಥೆ ಬಂದು ತಲುಪಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇವಲ ಕಾಂಗ್ರೆಸ್ ಸರ್ಕಾರದಲ್ಲೀಗ ನಡೆಯುತ್ತಿರುವುದು ಗುಂಪುಗಾರಿಕೆಯ ರಾಜಕಾರಣ ಹಾಗೂ ಕಾಂಗ್ರೆಸ್ ಉತ್ಸವಗಳು ಮಾತ್ರ. ಜನಹಿತ ಹಾಗೂ ಸಮಾಜ ಸುರಕ್ಷತೆಯನ್ನು ಮರೆತಿರುವ ಈ ಸರ್ಕಾರದ ವ್ಯವಸ್ಥೆಯಲ್ಲಿ ನಾಗರೀಕರು ಅಸುರಕ್ಷತೆಯ ವಾತಾವರಣವನ್ನು ಎದುರಿಸುತ್ತಿದ್ದಾರೆ. ಅಲ್ಲದೇ ಈ ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಇದೆಯೇ? ಗೃಹ ಇಲಾಖೆ ಇದೆಯೇ? ಒಂದು ಸರ್ಕಾರ ಈ ರಾಜ್ಯವನ್ನು ಆಳುತ್ತಿದೆಯೇ? ಎಂಬ ಪ್ರಶ್ನೆ ಜನಸಾಮಾನ್ಯರಿಂದ ಕೇಳಿ ಬರುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಒಂದು ಕಡೆ ಅಭಿವೃದ್ಧಿಯೂ ಇಲ್ಲ, ಮತ್ತೊಂದು ಕಡೆ ಆಡಳಿತ ನಿರ್ವಹಣೆಯಲ್ಲಿಯೂ ಸಂಪೂರ್ಣ ವಿಫಲವಾಗಿದೆ. ಕನಿಷ್ಠ ಕಾನೂನು ಸಂರಕ್ಷಣೆಯನ್ನಾದರೂ ಒದಗಿಸಲಾಗದ ಈ ಸರ್ಕಾರ ಯಾವ ಮುಖ ಹೊತ್ತುಕೊಂಡು ಅಧಿಕಾರದಲ್ಲಿದೆ ಎಂದು ಜನ ಪ್ರಶ್ನಿಸುತ್ತಿದ್ದಾರೆ. ಜೊತೆಗೆ ಬೆಂಗಳೂರಿನಲ್ಲಿ ನಡೆದಿರುವ ಅತ್ಯಾಚಾರ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಅತ್ಯಾಚಾರಿ ದುರುಳರನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಒಳಪಡಿಸಲಿ ಎಂದು ಆಗ್ರಹಿಸಿದ್ದಾರೆ.
ಸರಣಿ ರೂಪದಲ್ಲಿ ನಡೆಯುತ್ತಿರುವ ಕೊಲೆ, ದರೋಡೆ ಪ್ರಕರಣಗಳು, ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದ್ದು, ರಾಜ್ಯದಲ್ಲಿ ಅರಾಜಕತೆ ಪರಿಸ್ಥಿತಿ ಉಂಟಾಗಿರುವುದನ್ನು ಸಾಕ್ಷೀಕರಿಸುತ್ತಿದೆ. ಇಂತಹ ಘಟನೆಗಳು ಮರುಕಳಿಸುತ್ತಿದ್ದರೆ ಈ ಸರ್ಕಾರಕ್ಕೆ ಜನರೇ ತಕ್ಕಪಾಠ ಕಲಿಸುವ ಪರಿಸ್ಥಿತಿ ಉದ್ಭವಿಸುವುದರಲ್ಲಿ ಯಾವುದೇ ಅನುಮಾನವಿಲ್ಲ. ಹೀಗಾಗಿ ಬಜೆಪಿ ಪಕ್ಷವೂ ಈ ನಿಟ್ಟಿನಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆಯ ಭದ್ರತೆಗಾಗಿ ಹೋರಾಡಲಿದೆ.