ಬೆಂಗಳೂರು: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಬಿಜೆಪಿ ರಾಜ್ಯಾಧ್ಯಕ್ಷರ ಚುನಾವಣೆ ನಡೆಸಿ, ಅಧ್ಯಕ್ಷರ ಸ್ಥಾನಕ್ಕೆ ಸೂಕ್ತರನ್ನು ಆಯ್ಕೆ ಮಾಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಜನವರಿ.18) ಬಿಜೆಪಿ ರಾಜ್ಯಾಧ್ಯಕ್ಷ ಚುನಾವಣೆಗೆ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ನಮ್ಮ ಪಕ್ಷದ ನಾಯಕರು ಈ ಕುರಿತು ಬಹಿರಂಗವಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಆದರೆ ನಾನು ಇದೆಲ್ಲಾವನ್ನು ಅಲ್ಲೆಗೆಳೆಯುವುದಿಲ್ಲ. ಏಕೆಂದರೆ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ಮುಂದಿನ ದಿನಗಳಲ್ಲಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆಸುತ್ತೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಅವರು ಬಿಜೆಪಿ ಹೈಕಮಾಂಡ್‌ನೊಂದಿಗೆ ಸಮಾಲೋಚನೆ ಮಾಡಿ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ರಾಜ್ಯದಲ್ಲಿ ನಾನು ಬಿಜೆಪಿ ಅಧ್ಯಕ್ಷನಾಗಿ ಅಧಿಕಾರವಹಿಸಿಕೊಂಡ ದಿನದಿಂದ ಇಲ್ಲಿಯವರೆಗೂ ಸರ್ಕಾರದ ವಿರುದ್ಧ ನಡೆಸಬೇಕಾದ ಹೋರಾಟಗಳನ್ನು ಮಾಡಿದ್ದೇನೆ. ಇನ್ನೂ ಪಕ್ಷದಲ್ಲಿ ಕಾರ್ಯಕರ್ತರನ್ನು ಸಂಘಟಿಸುವ ಪ್ರಯತ್ನ ಮಾಡಿದ್ದೇನೆ ಎಂದರು.
ಇದೇ ಸಂದರ್ಭದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಇಲ್ಲಿ ಯಾರಿಗೂ ಉಪಕಾರ ಮಾಡುತ್ತಿಲ್ಲ. ಆಯಾಯ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ನ್ಯಾಯವಾಗಿ ದಕ್ಕ ಬೇಕಿರುವ ಅನುದಾನವನ್ನು ಬಿಡುಗಡೆ ಮಾಡುತ್ತಿದ್ದಾರೆ. ಅದು ಸರ್ಕಾರದ ಕರ್ತವ್ಯವಾಗಿದ್ದು, ಎಲ್ಲಾ ಕ್ಷೇತ್ರದ ಶಾಸಕರು ಅಭಿವೃದ್ಧಿ ಕಾರ್ಯ ಮಾಡಲು ಕಾಯುತ್ತಿದ್ದಾರೆ. ಆದರೆ ಸರ್ಕಾರ ಬಂದು ಎರಡೂ ವರ್ಷಗಳು ಕಳೆದರೂ ಸರಿಯಾದ ರೀತಿಯಲ್ಲಿ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ.