ಬೆಂಗಳೂರು: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಕೂಡ್ಲಿಗಿ ಮೂಲದ ಬಾಣಂತಿ ಸಾವನ್ನಪ್ಪಿದ ಪ್ರಕರಣದ ಬಗ್ಗೆ ಸಂಪೂರ್ಣ ತನಿಖೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರು, ಅಲ್ಲಿನ ಜಿಲ್ಲಾಧಿಕಾರಿಗೆ ಖಡಕ್ ಸೂಚನೆ ನೀಡಿದ್ದಾರೆ.
ಪ್ರಕರಣ ಸಂಬಂಧ ಬಳ್ಳಾರಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರ ಬಳಿ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.
ಸಚಿವರಿಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರ ಅವರು, ಈ ಹಿಂದೆ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ್ದ ನಾಲ್ವರು ಬಾಣಂತಿಯರ ಸಾವು ಪ್ರಕರಣಕ್ಕೂ ಈ ಘಟನೆಗೂ ಸಂಬಂಧವಿಲ್ಲ. ಕೂಡ್ಲಿಗಿ ಗುಡೇಕೋಟೆ ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಮಹಾಲಕ್ಷ್ಮೀ ಎಂಬುವವರು ಬಿಮ್ಸ್‌ಗೆ ಇದೇ.24ರಂದು ದಾಖಲಾಗಿ 26ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸಂಪೂರ್ಣ ವರದಿ ಪಡೆಯಲಾಗಿದೆ. ಮುಂದೆ ಇಂತಹ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಸಚಿವರಿಗೆ ತಿಳಿಸಿದರು.