ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ತಡೆ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಅರ್ಜಿ ಸಲ್ಲಿಸಿದ್ದಾರೆ.
ದಸರಾ ಉದ್ಘಾಟನೆ ವೇಳೆ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ. ವೇದ ಮಂತ್ರ, ಧಾರ್ಮಿಕ ಆಚರಣೆಗಳೊಂದಿಗೆ ಉದ್ಘಾಟನೆ ಮಾಡಬೇಕೆಂಬ ಸಂಪ್ರದಾಯವಿದೆ. ಬಾನು ಮುಷ್ತಾಕ್ ಹಿಂದೂ ವಿರೋಧಿ. ಕನ್ನಡ ವಿರೋಧಿ ಭಾವನೆ ಹೊಂದಿದ್ದಾರೆ. ರಾಜ್ಯ ಸರ್ಕಾರ ಏಕಪಕ್ಷೀಯವಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದೆ. ಸರ್ಕಾರದ ಕ್ರಮಕ್ಕೆ ತಡೆ ನೀಡಬೇಕು.
ಮೈಸೂರಿನ ರಾಜಮನೆತನದವರು ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದಾರೆ. ಸರ್ಕಾರದ ನಿರ್ಧಾರದಿಂದ ಹಿಂದೂಗಳ ಭಾವನೆಗೆ ಘಾಸಿಯಾಗಿದೆ. ಬಾನು ಮುಷ್ತಾಕ್ ಅವರಿಗೆ ನೀಡಿದ ಆಹ್ವಾನ ಹಿಂಪಡೆಯುವಂತೆ ನಿರ್ದೇಶನ ನೀಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.





