ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗ ರಚಿಸಿ ತನಿಖೆ ಕೈಗೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ತಮ್ಮ ಸಾಮಾಜಿಕ ಜಾಲ ತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಈ ಕೂಡಲೇ ಶಾಸಕ ಜನಾರ್ಧನ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು ಅವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖರಿಗೆ ಸೂಕ್ತ ಭದ್ರತೆ ನೀಡಬೇಕೆಂದು ಒತ್ತಾಯಿಸಿದ್ದಾರೆ.
ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ಅವರ ಮನೆ ಎದುರು ನಡೆದಿರುವ ನಿನ್ನೆಯ ಘಟನೆ ಕಾಂಗ್ರೆಸ್ ಗೂಂಡಾಗಳು ನಡೆಸಿದ ಸರ್ಕಾರಿ ಪ್ರಾಯೋಜಕತ್ವದ ಪೂರ್ವ ನಿಯೋಜಿತ ದುಷ್ಕøತ್ಯವಾಗಿದೆ, ಸದರಿ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸುವೆ ಎಂದು ಹೇಳಿರುವ ಅವರು, ಜನಾರ್ಧನ ರೆಡ್ಡಿ ಮತ್ತವರ ಕುಟುಂಬವನ್ನು ಗುರಿಯನ್ನಾಗಿಸಿಕೊಂಡು ನಡೆದಿರುವ ಈ ಘಟನೆಗೆ ಮಹರ್ಷಿ ವಾಲ್ಮೀಕಿ ಪ್ರತಿಮೆಯ ಉದ್ಘಾಟನೆಯ ಕಾರ್ಯಕ್ರಮದ ಬ್ಯಾನರ್ ಅಳವಡಿಸುವುದನ್ನು ನೆಪವಾಗಿಸಿಕೊಳ್ಳಲಾಗಿದೆ. ಬಳ್ಳಾರಿಯಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿದಿಲ್ಲ. ನಾಗರಿಕ ಸಮಾಜ ನೆಮ್ಮದಿಯಾಗಿ ಬದುಕುವ ವಾತಾವರಣವನ್ನು ವಿಚಲಿತಗೊಳಿಸಿ, ಭಯಗ್ರಸ್ಥ ನಗರವನ್ನಾಗಿಸಲು ಸ್ಥಳೀಯ ಶಾಸಕರ ಕುಮ್ಮಕ್ಕಿನಿಂದ ಅವರ ಬೆಂಬಲಿಗರು ದುಷ್ಕೃತ್ಯಕ್ಕೆ ಇಳಿದಂತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
ಜನಾರ್ದನ ರೆಡ್ಡಿಯವರು ಬಿಜೆಪಿಗೆ ಮರು ಸೇರ್ಪಡೆಯಾದನಂತರ ಸ್ಥಳೀಯವಾಗಿ ಪಕ್ಷಸಂಘಟನೆ ಪ್ರಬಲವಾಗುತ್ತಿರುವುದು, ರೆಡ್ಡಿ ಮತ್ತು ಮಾಜಿ ಸಚಿವ ಬಿ.ಶ್ರೀರಾಮುಲು ಅವರ ನಡುವಿನ ಬಾಂಧವ್ಯ ಹಿಂದಿನಂತೆ ಬೆಸೆದಿರುವುದು ರಾಜಕೀಯ ದುಷ್ಟರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ವಿಪರ್ಯಾಸವೆಂದರೆ ಸ್ಥಳೀಯ ಪೊಲೀಸ್ ಠಾಣೆಗಳು ಕಾಂಗ್ರೆಸ್ ಕಛೇರಿಗಳಾಗಿ ಮಾರ್ಪಟ್ಟಿವೆ. ಸ್ಥಳೀಯ ಪೊಲೀಸರು ಕಾಂಗ್ರೆಸ್ ಕೈಗೊಂಬೆಯಾಗಿದ್ದಾರೆ, ಪೊಲೀಸರು ಮುನ್ನೆಚ್ಚರಿಕೆ ಕ್ರಮ ವಹಿಸಿದ್ದರೆ ಈ ದುಷ್ಕೃತ್ಯವನ್ನು ತಡೆಯಬಹುದಿತ್ತು ಎಂದು ವಿಜಯೇಂದ್ರ ಹೇಳಿದ್ದಾರೆ.





