ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸುವಂತೆ ಲೋಕಾಯುಕ್ತ ಮುಖ್ಯ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಆದೇಶ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಇಂದು ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಬೆನ್ನಲ್ಲೇ ಮಹತ್ವದ ಬೆಳವಣಿಗೆ ನಡೆದಿದೆ.
ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿದ ಐವರು ಬಾಣಂತಿಯರ ಸಾವಿನ ಬಗ್ಗೆ ಪ್ರಕರಣ ದಾಖಲಿಸಿ ತನಿಖೆ ನಡೆಸಬೇಕು. ಘಟನೆ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹಾಗೂ ಔಷಧ ನಿಯಂತ್ರಕರು ಹಾಗೂ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಯಮಿತ ವ್ಯವಸ್ಥಾಪಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಮೂರ್ತಿಗಳು ಆದೇಶಿಸಿದ್ದಾರೆ.
ಈ ಬಗ್ಗೆ ಬಳ್ಳಾರಿ ಲೋಕಾಯುಕ್ತ ಅಧಿಕಾರಿಗಳಿಗೆ ತನಿಖೆ ನಡೆಸುವ ಹೊಣೆ ನೀಡಲಾಗಿದೆ. ಸರ್ಚ್ ವಾರೆಂಟ್ ಪಡೆದು ಘಟನೆ ನಡೆದ ಆಸ್ಪತ್ರೆ, ಔಷಧ ಉಗ್ರಾಣ ತಪಾಸಣೆ ನಡೆಸಿ ವರದಿ ಸಲ್ಲಿಸಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಈ ಮೂಲಕ ಇತರ ಜಿಲ್ಲೆಗಳಲ್ಲಿ ಇಂತಹ ದುರ್ಘಟನೆ ನಡೆಯುವ ಸಾಧ್ಯತೆ ಇದೆಯೇ ಎಂಬುದರ ಕುರಿತು ಮುನ್ನೆಚ್ಚರಿಕೆಯಾಗಿ ತಪಾಸಣೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.