ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನ ಕೋಗಿಲು ಲೇಔಟ್‌ನಲ್ಲಿ ಅಕ್ರಮ ಮನೆಗಳು ನೆಲಸಮ ಮಾಡಲಾಗಿತ್ತು. ಇದು ಕೇರಳ ಸಿಎಂ ವರೆಗೂ ತಲುಪಿ ಅವರು ಈ ಕೃತ್ಯವನ್ನುಬುಲ್ಡೋಜರ್ ರಾಜ್ ಎಂದು ಟ್ವೀಟ್ ಮೂಲಕ ಕುಟುಕಿದ್ದರು. ಬಳಿಕ ಈ ವಿಷಯ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೂ ತಲುಪಿತ್ತು.
ಇದೀಗ ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಸಭೆ ನಡೆಸಿದ್ದು, ಕೋಗಿಲು ಬಡಾವಣೆಯ ಅರ್ಹರಿಗೆ 7 ಕಿ.ಮೀ ವ್ಯಾಪ್ತಿಯಲ್ಲೇ ಬದಲೀ ಮನೆ ಕೊಡಲು ತೀರ್ಮಾನ ಮಾಡಿದ್ದಾರೆ.
ಸಿಎಂ ಸಭೆಯ ಇತರೆ ಸೂಚನೆಗಳು ಇಂತಿವೆ
ಕೋಗಿಲು ಬಡಾವಣೆಯಲ್ಲಿ ಡಿಸೆಂಬರ್ 20ರಂದು ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಶೆಡ್ ಗಳನ್ನು ನಿರ್ಮಾಣ ಮಾಡಿದ್ದ ಸುಮಾರು 167 ಶೆಡ್‌ಗಳನ್ನು ತೆರವುಗೊಳಿಸಲಾಗಿತ್ತು. ಅವರೆಲ್ಲರಿಗೂ ನೋಟಿಸ್ ನೀಡಿ, ಸರ್ಕಾರದ ಜಾಗವಾಗಿದ್ದು ತೆರವು ಮಾಡುವಂತೆ ಅವರ ಗಮನಕ್ಕೂ ತರಲಾಗಿತ್ತು, ಆದರೂ ಅವರು ಖಾಲಿ ಮಾಡಿರಲಿಲ್ಲ. ನಿನ್ನೆ ನಾನು ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮತ್ತು ಸಿಎಂ ರಾಜಕೀಯ ಕಾರ್ಯದರ್ಶಿಯಾದ ನಸೀರ್ ಅಹ್ಮದ್ ಅವರನ್ನು ಸ್ಥಳಕ್ಕೆ ಕಳಿಸಿಕೊಟ್ಟಿದ್ದೆ. ಇಂದು ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಕೂಡ ಅಧಿಕಾರಿಗಳ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಕಸ ವಿಲೇವಾರಿ ಮಾಡುವ ಉದ್ದೇಶಕ್ಕೆ 15 ಎಕರೆ ಜಮೀನನ್ನು ಜಿಲ್ಲಾಧಿಕಾರಿಗಳು ನಗರ ಪಾಲಿಕೆಗೆ ಹಸ್ತಾಂತರ ಮಾಡಿದ್ದರು. ಬಂಡೆ ಕ್ವಾರಿ ಕೂಡ ಅಲ್ಲಿದೆ. ಪಾಲಿಕೆಯವರು ಕಸ ಹಾಕುತ್ತಿದ್ದು, ಭೂಮಿ ಅವರ ಸ್ವಾಧೀನದಲ್ಲೇ ಇದೆ. ನಾವು ಸುಮಾರು 2020-21 ರಿಂದ ಈ ರೀತಿ ಅಕ್ರಮವಾಗಿ ಶೆಡ್ ಕಟ್ಟಿಕೊಂಡು ವಾಸ ಮಾಡುತ್ತಿದ್ದರು, ಹೀಗಾಗಿ ಅಲ್ಲಿನ ಕಂದಾಯ ಇಲಾಖೆ ಹಾಗೂ ಪಾಲಿಕೆ ಅಧಿಕಾರಗಳ ಮೇಲೆ ಕ್ರಮ ಜರುಗಿಸುವಂತೆ ಸೂಚಿಸಿದ್ದೇನೆ. ತಹಶಿಲ್ದಾರರಿಗೆ, ಶಿರಸ್ಥೆದಾರರಿಗೆ ಗೊತ್ತಿಲ್ಲದೆ ಹೀಗೆ ಒತ್ತುವರಿ ಆಗಲು ಸಾಧ್ಯವಿಲ್ಲ. ಇನ್ನುಮುಂದೆ ಇಂತಹ ಘಟನೆ ಮರುಕಳಿಬಾರದು ಎಂಬ ಕಾರಣಕ್ಕೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುತ್ತೇವೆ ಎಂಬ ಎಚ್ಚರಿಕೆ ನೀಡಿದರು.
ಇನ್ನುಮುಂದೆ ಯಾವುದೇ ಕಾರಣಕ್ಕೂ ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಒಂದು ವೇಳೆ ಮನೆ ಕಟ್ಟಿದರೆ ಸಂಬಂಧಿಸಿದ ಅಧಿಕಾರಿಗಳನ್ನೇ ಜವಾಬ್ದಾರಿ ಮಾಡಲಾಗುತ್ತದೆ. ಅಕ್ರಮವಾಗಿ ಶೆಡ್‌ಗಳನ್ನು ಕಟ್ಟಿ ವಾಸವಿದ್ದವರಲ್ಲಿ ಮುಂದಿನ ಎರಡು ದಿನಗಳಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನವೀಯತೆ ನೆಲೆಯಲ್ಲಿ ಅರ್ಹ ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆ ಮಾಡಿಕೊಡಬೇಕು ಎಂಬ ತೀರ್ಮಾನಕ್ಕೆ ಸರ್ಕಾರ ಬಂದಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.





