ಬೆಂಗಳೂರು: ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಟೀಕಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸಿಎಂ ಕುರ್ಚಿಯ ಕಿತ್ತಾಟದಲ್ಲಿ ನಿರತರಾಗಿದ್ದಾರೆ. ಇಂತಹ ಸ್ಥಿತಿಯಲ್ಲಿ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿನಾಯಿಗಳಿಗೆ ಊಟ ನೀಡುವ ಯೋಜನೆ ತರಲಾಗಿದೆ. ಬೀದಿನಾಯಿಗಳ ಉಪಟಳದಿಂದ ಮಕ್ಕಳಿಗೆ ತೊಂದರೆಯಾಗುತ್ತಿದ್ದು, ಅದಕ್ಕಾಗಿ ನಾಯಿಗಳ ಸಂಖ್ಯೆ ಕಡಿಮೆ ಮಾಡಬೇಕು ಎಂಬ ಉದ್ದೇಶದ ಯೋಜನೆ ಬಿಬಿಎಂಪಿಯಲ್ಲಿದೆ. ಜನರು ಹಾಗೂ ಸಂಘಟನೆಗಳು ಈಗಾಗಲೇ ಬೀದಿನಾಯಿಗಳಿಗೆ ಊಟ ಹಾಕುತ್ತಿದ್ದಾರೆ. ಈಗ ಬೌ ಬೌ ಬಿರಿಯಾನಿ ಹಾಕುವ ಅಗತ್ಯವೇನಿದೆ? ಎಂದು ಪ್ರಶ್ನಿಸಿದರು.
ಪ್ರತಿ ಬೀದಿಗಳಲ್ಲಿ ಜನರು ಬೀದಿನಾಯಿಗಳಿಗೆ ಊಟ ಹಾಕುವುದು ಸಾಮಾನ್ಯವಾಗಿದೆ. ಈಗ ಹಣ ಲೂಟಿ ಮಾಡಲು ಇಂತಹ ಯೋಜನೆ ತರಲಾಗಿದೆ. ರಸ್ತೆಗಳಲ್ಲಿ ಗುಂಡಿಗಳು ಹೆಚ್ಚಾಗಿದೆ. ಉದ್ಯಾನವನಗಳ ನಿರ್ವಹಣೆ ಆಗುತ್ತಿಲ್ಲ. ಬಿಬಿಎಂಪಿ ಆಸ್ಪತ್ರೆಗಳಲ್ಲಿ ಸಂಬಳ ಕೊಡಲು ಹಣವಿಲ್ಲ. ಶಾಲೆಗಳ ಶಿಕ್ಷಕರಿಗೆ ಸಂಬಳ ನೀಡುತ್ತಿಲ್ಲ. ಯಾವುದಕ್ಕೂ ಹಣ ಇಲ್ಲ ಎಂದಾಗಿರುವಾಗ, ಬೀದಿನಾಯಿಗಳಿಗೆ ಬಿರಿಯಾನಿ ನೀಡಿ, ಅದರಲ್ಲಿ ಹಣ ಕೊಳ್ಳೆ ಹೊಡೆಯುವ ಸ್ಕೀಮ್ ತರಲಾಗಿದೆ ಎಂದರು.
ಈಗಾಗಲೇ ನಮ್ಮ ಸಾಮಾನ್ಯ ಆಹಾರಕ್ಕೆ ಹೊಂದಿಕೊಂಡಿರುವ ಅವುಗಳಿಗೆ ಇಂತಹ ಆಹಾರ ನೀಡುವುದರಿಂದ ಸಮಸ್ಯೆ ಉಂಟಾಗಬಹುದು. ಬಿಬಿಎಂಪಿಯ ಹಣವನ್ನು ತಿನ್ನಲು ದಾರಿ ಹುಡುಕಿಕೊಂಡಿದ್ದಾರೆ. ಮುಂದೆ ಬೆಕ್ಕು, ಹೆಗ್ಗಣಗಳಿಗೂ ಊಟ ನೀಡಬಹುದು ಎಂದರು.





