ಬೆಂಗಳೂರು: 17 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಆದೇಶ ನೀಡಿದ ಬೆನ್ನಲ್ಲೇ ರಾಜ್ಯ ಬಿಜೆಪಿ, ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರ ಹಾಕಿದೆ.
ನ್ಯಾಯಾಲಯ ಬಿಎಸ್‌ವೈ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಿದ ಬೆನ್ನಲ್ಲೇ ಬಿಜೆಪಿ ತಮ್ಮ ಎಕ್ಸ್ ಖಾತೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ಪ್ರಕರಣ ದಾಖಲಾಗಿ ಮೂರು ತಿಂಗಳಾದ ಬಳಿಕ ಬಂಧನದ ವಾರೆಂಟ್ ಏಕೆ? ಇದು ಕಾಂಗ್ರೆಸ್‌ನ ನೀಚ ರಾಜಕಾರಣದ ಎಂದು ತಿವಿದಿದೆ.
ಎಕ್ಸ್ ಪೋಸ್ಟ್‌ನಲ್ಲೇನಿದೆ?
https://x.com/BJP4Karnataka/status/1801255878336872946
ಲೋಕಸಭಾ ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ.
ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತರ ರೂಪಿಸಿದ್ದಾರೆ.
ಈ ಹಿಂದೆ ಸ್ವತಃ ಗೃಹ ಸಚಿವ ಪರಮೇಶ್ವರ್ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.
ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ?
ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ?
ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ.