ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಬಲಿಗ ನಾಯಕರು ಇಂದು ಬೆಂಗಳೂರಿನಲ್ಲಿ ಸಭೆ ನಡೆಸಿದ್ದು, ಭಿನ್ನಮತೀಯ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.
ಸದಾಶಿವನಗರದಲ್ಲಿರುವ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಿವಾಸದಲ್ಲಿ ಸಭೆ ನಡೆಸಿದ ಹಲವು ನಾಯಕರು, ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವವರನ್ನು ಉಚ್ಛಾಟನೆ ಮಾಡುವಂತೆ ಆಗ್ರಹಿಸಿದರು.
ಇಂದು ನಡೆದ ಸಭೆಯಲ್ಲಿ ರೇಣುಕಾಚಾರ್ಯ, ಸಂಪಂಗಿ, ಲಕ್ಷ್ಮೀನಾರಾಯಣ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ವಿಜಯೇಂದ್ರ ಪರ ಬ್ಯಾಟ್ ಮಾಡಿದರು.
ಸಭೆ ಬಳಿಕ ಮಾತನಾಡಿದ ಹಲವು ನಾಯಕರು, ಶಾಸಕ ಯತ್ನಾಳ್ ಅಂಡ್ ಟೀಂ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕುಮಾರ್ ಬಂಗಾರಪ್ಪ, ಜಿ.ಎಂ.ಸಿದ್ದೇಶ್ವರ್, ಡಿ.ಕೆ.ಹರೀಶ್ ಅವರನ್ನು ಮುಲಾಜಿಲ್ಲದೇ ಪಕ್ಷದಿಂದ ಕಿತ್ತುಹಾಕಬೇಕು. ಇಲ್ಲದಿದ್ದರೆ ಕಾರ್ಯಕರ್ತರಿಗೆ ತಪ್ಪು ಸಂದೇಶ ಹೋಗುತ್ತದೆ ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷರ ಆಯ್ಕೆಯಲ್ಲಿ ವಿಜಯೇಂದ್ರ ಅವರ ಪಾತ್ರವಿಲ್ಲ. ವರಿಷ್ಠರ ಸೂಚನೆಯಂತೆಯೇ ಅವರು ನೇಮಕ ಮಾಡಿದ್ದಾರೆ. ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯವನ್ನು ಪಡೆದುಕೊಂಡು ಅಂತಿಮವಾಗಿ ಎಲ್ಲರಿಗೂ ಒಪ್ಪಿಗೆಯಾಗುವವರನ್ನೇ ಆಯ್ಕೆ ಮಾಡಿದ್ದಾರೆ. ಇದಕ್ಕೆ ವಿರೋಧ ಮಾಡುವುದು ಸರಿಯಲ್ಲ ಎಂದರು.