Mysore
19
clear sky

Social Media

ಸೋಮವಾರ, 23 ಡಿಸೆಂಬರ್ 2024
Light
Dark

ಬಿಜೆಪಿಗರು ವಾಮ ಮಾರ್ಗದಲ್ಲಿ ಅಧಿಕಾರ ನಡೆಸಿ ರಾಜ್ಯವನ್ನು ದಿವಾಳಿ ಮಾಡಿದ್ದರು : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿನೀ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ವಾಮ ಮಾರ್ಗದಲ್ಲಿ ಅಧಿಕಾರ ನಡೆಸುವ ಮೂಲಕ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಈ ಬಗ್ಗೆ ನಗರದ  ಕೆಪಿಸಿಸಿ ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ಇಂದು ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಅವರು, ವಾಮ ಮಾರ್ಗದಲ್ಲಿ ಮೂರೂವರೆ ವರ್ಷ ಅಧಿಕಾರ ನಡೆಸಿದ ಬಿಜೆಪಿ ಮಾಡಬಾರದ್ದನ್ನೆಲ್ಲಾ ಮಾಡಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟು ಹೋಗಿತ್ತು.

ಬಿಜೆಪಿಯವರು ಚೆನ್ನಾಗಿ ತಿಂದು, ಸಾವಿರಾರು ಕೋಟಿ ಕೆಲಸ ಶುರು ಮಾಡಿಸಿ ಸುಮಾರು 40 ಸಾವಿರ ಕೋಟಿಗೂ ಹೆಚ್ಚು ಬಿಲ್ ಕೊಡದೆ, ಬಿಲ್ ಬಾಕಿ ಉಳಿಸಿ ಮನೆಗೆ ಹೋಗಿದ್ದಾರೆ. ದುರಾಡಳಿತ ನಡೆಸಿ ರಾಜ್ಯವನ್ನು ಆರ್ಥಿಕವಾಗಿ ದಿವಾಳಿ ಮಾಡಿಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

ನೀರಾವರಿ ಇಲಾಖೆಯೊಂದರಲ್ಲೇ 13 ಸಾವಿರ ಕೋಟಿಗೂ ಅಧಿಕ ಬಿಲ್ ಬಾಕಿ ಉಳಿಸಿದ್ದಾರೆ. ಲೋಕೋಪಯೋಗಿ ಇಲಾಖೆಯಲ್ಲಿ 9,000 ಕೋಟಿ, ಸಣ್ಣನೀರಾವರಿ ಇಲಾಖೆಯಲ್ಲಿ 2,000 ಕೋಟಿ ರೂಪಾಯಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ 6,000 ಕೋಟಿ ರೂಪಾಯಿ, ಬೆಂಗಳೂರು ನಗರ 5,000 ಕೋಟಿ ಬಿಲ್ ಬಾಕಿ ಉಳಿಸಿದ್ದಾರೆ.

ಹೀಗೆ ರಾಜ್ಯವನ್ನು ಹಾಳುಮಾಡಿ, ರಾಜ್ಯದ ಆರ್ಥಿಕತೆಯನ್ನು ಹಾಳುಗೆಡವಿ ಹೋಗಿದ್ದಾರೆ. ಇಷ್ಟಾದರೂ ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ.

೫ ಗ್ಯಾಂರೆಂಟಿಯಲ್ಲಿ ಬಿಜೆಪಿ ಫಲಾನುಭವಿಗಳೆ ಹೆಚ್ಚು: 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ ಬಿಜೆಪಿಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ ಮಾಡಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೆ ತಂದಿದ್ದೇವೆ. ಇದು ದೇಶದಲ್ಲೇ ಮೊದಲು. ಪ್ರತಿಯೊಬ್ಬ ಕಾರ್ಯಕರ್ತನೂ ಎದೆ ಎತ್ತಿ, ತಲೆ ಎತ್ತಿ ಹೇಳಿ ಎಂದಿದ್ದಾರೆ. ನಮ್ಮ ಗ್ಯಾರಂಟಿಗಳನ್ನು ಅಣಕಿಸಿ ಈಗ ನಮ್ಮ ಗ್ಯಾರಂಟಿಗಳನ್ನೇ ಕಾಪಿ ಮಾಡಿ ಅದಕ್ಕೆ ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸರ್ಕಾರದ ಕೆಲಸಗಳನ್ನು ಪ್ರತಿ ಮನೆಗೆ ತಲುಪಿಸಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯವರ ಸುಳ್ಳನ್ನು ಸೋಲಿಸಿ ನಮ್ಮ ಸಾಧನೆಗಳನ್ನು ಎತ್ತಿ ಹಿಡಿಯುವ ಮೂಲಕ 28 ಲೋಕಸಭಾ ಸ್ಥಾನಗಳಲ್ಲಿ ಗೆಲ್ಲಿಸಿ ಎಂದು ಕಾರ್ಯಕರ್ತರಿಗೆ ಕೈಮುಗಿದು ಮನವಿ ಮಾಡುತ್ತೇನೆ. ದಯವಿಟ್ಟು ನಿಮ್ಮ ಹೃದಯದ ಮಾತು ಕೇಳಿ ಎಂದಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ