ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ವಿಜಯೇಂದ್ರರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ಹೈಕಮಾಂಡ್ ನಿರ್ಧಾರ ಮಾಡಿದೆ. ಹೀಗಾಗಿ ವಿಜಯೇಂದ್ರ ತಮ್ಮ ಕುರ್ಚಿ ಉಳಿಸಿಕೊಳ್ಳಲು ಈ ಜನಾಕ್ರೋಶ ಯಾತ್ರೆ ಮಾಡುತ್ತಿದ್ದಾರೆ ಎಂದು ಟೀಕೆ ಮಾಡಿದರು.
ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಾಡುತ್ತಿರುವ ಅನ್ಯಾಯದ ವಿರುದ್ಧ ದನಿ ಎತ್ತಲಾಗದೇ ಈ ಜನಾಕ್ರೋಶ ಯಾತ್ರೆ ಮಾಡಿದರೆ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ವಿಫಲಗೊಳಿಸುವ ಏಕೈಕ ಉದ್ದೇಶದಿಂದ ರಾಜ್ಯದ ಬಿಜೆಪಿ ನಾಯಕರು ಕೇಂದ್ರ ಸರ್ಕಾರದ ಜೊತೆ ಶಾಮೀಲಾಗಿ ರಾಜ್ಯಕ್ಕೆ ನ್ಯಾಯಬದ್ಧವಾಗಿ ಸಿಗಬೇಕಾದ ತೆರಿಗೆ ಪಾಲು ಮತ್ತು ಅನುದಾನಕ್ಕೆ ಕತ್ತರಿ ಹಾಕಿಸಿದ್ದಾರೆ ಎಂದು ಗುಡುಗಿದರು.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆಗೆ ತುಂಬಾ ಉಪಯೋಗವಾಗಿದೆ. ಬಡ ಹಾಗೂ ಮಧ್ಯಮ ವರ್ಗದ ಜನರು ಯೋಜನೆಯಿಂದ ತುಂಬಾ ಉಪಯೋಗ ಪಡೆದುಕೊಳ್ಳುತ್ತಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.