ಬಿಜೆಪಿ – ಜೆಡಿಎಸ್‌ ಮೈತ್ರಿ ತಾ.ಪಂ, ಜಿ.ಪಂ ಚುನಾವಣೆಯಲ್ಲೂ ಮುಂದುವರಿಕೆ: ಹೆಚ್‌ಡಿಕೆ

ಬೆಂಗಳೂರು: ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯತ್‌ ಚುನಾವಣೆಗೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸಂಸದರ ಅಭಿನಂದನಾ ಸಮಾರಂಭದಲ್ಲಿ ಈ ಬಗ್ಗೆ ಮಾತನಾಡಿದ ಅವರು, ಕಳೆದ 2018ರಲ್ಲೂ ನನಗೆ ಬಿಜೆಪಿ ಜೊತೆ ಸೇರಿ ಸರ್ಕಾರ ಮಾಡುವ ಆಸೆಯಿತ್ತು. ಈಗ ಆ ವಿಷಯಗಳನ್ನು ಚರ್ಚೆ ಮಾಡಲ್ಲ. ಅದು ಮುಗಿದು ಹೋದ ಪ್ರಸಂಗ. ಆಗಿರುವ ಎಲ್ಲಾ ಕಹಿ ಘಟನೆಗಳನ್ನು ಮರೆತು ಮುಂದೆ ಹೋಗಬೇಕಿದೆ.

ಲೋಕಸಭೆ ಚುನಾವಣೆಯಲ್ಲಿ ಮಾಡಿಕೊಂಡ ಮೈತ್ರಿಯಂತೆ ಮುಂದಿನ ಪಾಲಿಕೆ ಚುನಾವಣೆ, ಜಿಲ್ಲಾ ಪಂಚಾಯತ್‌, ತಾಲ್ಲೂಕು ಪಂಚಾಯತ್‌ ಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗೂ ನಾವು ಸಜ್ಜಾಗಬೇಕಿದೆ ಎಂದು ಕರೆ ನೀಡಿದರು.

ಇನ್ನೂ ಮುಂದುವರಿದು ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು ಗ್ಯಾರಂಟಿ ಯೋಜನೆಯಿಂದ ರಾಜ್ಯ ಸರ್ಕಾರದ ಬೊಕ್ಕಸ ಖಾಲಿಯಾಗಿದೆ. ಇದರ ನಡುವೆ ಈಗ ಪೆಟ್ರೋಲ್‌, ಡೀಸೆಲ್‌ ಬೆಲೆ ಕೂಡ ಜಾಸ್ತಿಯಾಗಿದೆ. ಬೆಲೆ ಏರಿಕೆಗೆ ಗ್ಯಾರಂಟಿ ಯೋಜನೆಗಳೇ ಮುಖ್ಯ ಕಾರಣ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಸರ್ಕಾರ ಹೆಣಗಾಡುತ್ತಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು.