ಬೆಂಗಳೂರು: ಬಿಜೆಪಿ-ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ನಾವು ಜನರಿಗೆ ಏನು ತಿಳಿಸಬೇಕು ಅದನ್ನು ಸಮಾವೇಶಗಳ ಮೂಲಕ ತಿಳಿಸುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ.
ಮುಡಾ ಹಗರಣ ಹಾಗೂ ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರವಿದೆ ಎಂದು ಆರೋಪಿಸಿ ಬಿಜೆಪಿ-ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿಗೆ ಆಗಸ್ಟ್.3ರಿಂದ 7 ದಿನ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಈಗಾಗಲೇ ಹೇಳಿದ್ದೇನೆ. ಪಾದಯಾತ್ರೆಯಿಂದ ಜನರಿಗೆ ತೊಂದರೆಯಾದರೆ ಸುಮ್ಮನಿರಲ್ಲ. ಕಾನೂನು ಬಾಹಿರ ಕೆಲಸ ಮಾಡಿದರೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಡಿಕೆಶಿ ಸೂಚನೆ ಮೇರೆಗೆ ವಿಜಯೇಂದ್ರ ಪಾದಯಾತ್ರೆ ಮಾಡುತ್ತಿದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಮಗೆ ಬುದ್ದಿ ಹೇಳುವ ಮೊದಲು ಅವರು ತಮ್ಮ ಮನೆಯನ್ನು ಸರಿಮಾಡಿಕೊಳ್ಳಲಿ ಎಂದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಪಾದಯಾತ್ರೆಯಿಂದ ಏನೂ ಪ್ರಯೋಜನವಿಲ್ಲ. ಸುಖಾಸುಮ್ಮನೆ ರಾಜ್ಯ ಸರ್ಕಾರದ ವಿರುದ್ಧ ಆರೋಪ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.