ಬೆಂಗಳೂರು: ಯಡಿಯೂರಪ್ಪ ಮುಕ್ತ ಬಿಜೆಪಿಗಾಗಿ ನಾನು ಹೋರಾಟ ನಡೆಸುತ್ತಿದ್ದೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಮರ ಸಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನು ಹೇಗಾದರೂ ಮಾಡಿ ಕೆಳಗಿಳಿಸಬೇಕು ಎಂದು ಪಣ ತೊಟ್ಟಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ದೆಹಲಿಗೆ ಹೋಗಿ ವರಿಷ್ಠರನ್ನು ಮತ್ತೊಮ್ಮೆ ಭೇಟಿ ಮಾಡುವ ಪ್ಲಾನ್ ಮಾಡಿದ್ದಾರೆ ಎನ್ನಲಾಗುತ್ತಿದೆ.
ಪದೇ ಪದೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಸಮರ ಸಾರುತ್ತಿರುವ ಯತ್ನಾಳ್ ಬಿಎಸ್‌ವೈ ಮುಕ್ತ ಬಿಜೆಪಿಗಾಗಿ ನಾನು ನಿರಂತರ ಹೋರಾಟ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ವಂಶವಾದವನ್ನು ದ್ವೇಷಿಸುತ್ತಾರೆ. ತಮ್ಮ ಹೋರಾಟಕ್ಕೆ ಅವರ ಹೇಳಿಕೆಗಳೇ ಆಧಾರ ಎಂದರು.
ನಾನು ಒಂದು ಕುಟುಂಬದ ವಿರುದ್ಧ ಹೋರಾಟ ಮಾಡುತ್ತಿದ್ದೇನೆ. ಆದ್ದರಿಂದ ಆ ಪಕ್ಷದ ಸದಸ್ಯರೇ ಪಕ್ಷದ ರಾಜ್ಯಾಧ್ಯಕ್ಷರಾರೋದು ಬೇಡ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಕೆಳಗಿಳಿಯಲೇಬೇಕು ಎಂದು ಆಗ್ರಹಿಸಿದರು.