ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಂದು ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿ ಒಂದು ಗಂಟೆಗಳ ಕಾಲ ವಿಚಾರಣೆ ಎದುರಿಸಿ ಅಂದು ನಡೆದ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಅಸಂವಿಧಾನಿಕ ಪದ ಬಳಕೆ ಮಾಡಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದರು.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಸದನದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ʼಪ್ರಾಸ್ಟಿಟ್ಯೂಡ್ʼ ಪದ ಬಳಕೆ ಮಾಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.
ಈ ಸಂಬಂಧ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಬೆಳಗಾವಿ ಪೊಲೀಸರು ಸಿ.ಟಿ.ರವಿ ಅವರನ್ನು ಬಂಧಿಸಿ ರಾತ್ರಿಯಿಡಿ ಸುತ್ತಾಡಿಸಿದ ಬಗ್ಗೆ ಚರ್ಚೆಯಾಗಿತ್ತು. ನಂತರ ಸಿ.ಟಿ.ರವಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಇದಾದ ಬಳಿಕ ರಾಜ್ಯ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿತ್ತು. ಈಗ ವಿಚಾರಣೆಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಇಂದು ವಿಚಾರಣೆಗ ಹಾಜರಾಗಿದ್ದ ಸಿ.ಟಿ.ರವಿ ಅವರು, ಘಟನೆಯ ವೇಳೆ ಯಾರೆಲ್ಲಾ ಇದ್ದರು ಎಂಬುದರ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ನನ್ನ ಮೇಲೆ ಸುವರ್ಣಸೌಧದಲ್ಲಿ ಹಲ್ಲೆಗೆ ಯತ್ನ ನಡೆದಿತ್ತು. ಅದರ ಬಗ್ಗೆ ವಿಚಾರಣೆ ಇತ್ತು. ಹಲ್ಲೆ ನಡೆದಿರುವ ಬಗ್ಗೆ ಸಿಸಿ ಕ್ಯಾಮರಾದಲ್ಲೂ ದಾಖಲೆಗಳಿವೆ. ಕ್ಯಾಮರಾ ಫೂಟೇಜ್ ನೀಡಿದರೆ ಗುರುತಿಸುವುದಾಗಿ ಹೇಳಿದ್ದೇನೆ ಎಂದು ಮಾಹಿತಿ ನೀಡಿದರು.





