ಬೆಂಗಳೂರು: ಬೀದರ್‌ನ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕೆಂದು ಬಿಜೆಪಿ ಪೋಸ್ಟರ್ ಅಭಿಯಾನ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.
ಇಂದು ಸಚಿವ ಪ್ರಿಯಾಂಕ್ ಖರ್ಗೆ ಮನೆ ಮುಂದೆ ಜಮಾಯಿಸಿದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಪೋಸ್ಟರ್ ಅಂಟಿಸಿ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಸದಸ್ಯ ಸಿ.ಟಿ.ರವಿ ಹಾಗೂ ಬಿಜೆಪಿ ಕಾರ್ಯಕರ್ತರೆಲ್ಲಾ ಸೇರಿ ಪ್ರಿಯಾಂಕ್ ಖರ್ಗೆ ಪ್ರಾಯೋಜಿತ ಸುಪಾರಿ, ಸುಪಾರಿ ಸ್ಪಾನ್ಸರ್ ಖರ್ಗೆ ಎಂಬ ಪೋಸ್ಟರ್ ಹಿಡಿದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇನ್ನು ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರು, ಪ್ರಾಮಾಣಿಕ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ʼಸೂಸೈಡ್ ಭಾಗ್ಯʼ ಹಾಗೂ ರಾಜಕೀಯ ಎದುರಾಳಿಗಳಿಗೆ ʼಸುಪಾರಿ ಭಾಗ್ಯʼ ದ ಗ್ಯಾರಂಟಿ ನೀಡಿದ ಕಾಂಗ್ರೆಸ್ ಸರ್ಕಾರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಆತ್ಮಹತ್ಯೆಗೆ ಶರಣಾಗಿರುವ ಸಚಿನ್ ಕುಟುಂಬಕ್ಕೆ ನ್ಯಾಯ ಸಿಗಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ನಿಲ್ಲಲ್ಲ. ನಮ್ಮ ಹೋರಾಟ ನಿಲ್ಲಬೇಕೆಂದರೆ ಸಚಿವ ಸ್ಥಾನಕ್ಕೆ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.





