ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕೆಂಡಾಮಂಡಲರಾಗಿದ್ದು, ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಸಜ್ಜಾಗಿದ್ದಾರೆ.
ರಾಜ್ಯದಲ್ಲಿ ಪೆಟ್ರೋಲ್, ಡೀಸೆಲೆ ಬೆಲೆ ಏರಿಕೆ ಬೆನ್ನಲ್ಲೇ ಈಗ ಹಾಲಿನ ದರ ಹೆಚ್ಚಳ ಮಾಡಲಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಜನರಿಗೆ ಏನೂ ಉಪಯೋಗವಲ್ಲದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ರಾಜ್ಯ ಸರ್ಕಾರ ದಿನದಿಂದ ದಿನಕ್ಕೆ ಎಲ್ಲಾ ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರುತ್ತಿದೆ. ಈಗ ಹಾಲಿನ ಬೆಲೆ ಏರಿಕೆ ಮಾಡಲಾಗಿದ್ದು, ಜನಸಾಮಾನ್ಯರ ಹೊಟ್ಟೆಯ ಮೇಲೆ ಬರೆ ಎಳೆದಿದೆ ಎಂದು ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಕೆಂಡ ಕಾರಿದ್ದಾರೆ.
ಸರ್ಕಾರ ಹಾಲಿನ ದರ ಏರಿಕೆ ಮಾಡಿರುವ ಬಗ್ಗೆ ಬೆಂಗಳೂರಿನಲ್ಲಿ ತೀವ್ರ ವಾಗ್ದಾಳಿ ನಡೆಸಿದ ವಿಪಕ್ಷ ನಾಯಕ ಆರ್.ಅಶೋಕ್ ಅವರು, ರಾಜ್ಯದಲ್ಲಿ ದಿನೇ ದಿನೇ ಯಾವುದಾದರೊಂದು ವಸ್ತುಗಳ ಬೆಲೆಯನ್ನು ಏರಿಕೆ ಮಾಡುತ್ತಲೇ ಬರಲಾಗುತ್ತಿದೆ. ಬೆಲೆ ಏರಿಕೆಗೆ ಮೂಲ ಕಾರಣವೇ ಗ್ಯಾರಂಟಿ ಯೋಜನೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಸಾಧ್ಯವಾಗದೇ ರಾಜ್ಯ ಸರ್ಕಾರ ಈ ರೀತಿಯ ಆಟವಾಡುತ್ತಿದೆ. ಯಾವುದೇ ಮುಂದಾಲೋಚನೆ ಇಲ್ಲದೆಯೇ ಗ್ಯಾರಂಟಿ ಯೋಜನೆ ಜಾರಿ ಮಾಡಿ ಈಗ ಜನಸಾಮಾನ್ಯರು ನರಳುವಂತೆ ಮಾಡಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ಹಾಲಿನ ಬೆಲೆ ಏರಿಕೆ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಲಿದೆ. ಜುಲೈ.3 ಅಥವಾ 4ರಂದು ನಮ್ಮ ನಾಯಕರುಗಳೆಲ್ಲಾ ಸೇರಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ. ಅಂದು ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನೆಯ ಬಗ್ಗೆ ಮಾಹಿತಿ ನೀಡಿದರು. ಹಾಲಿನ ದರ ಇಳಿಕೆ ಮಾಡುವವರೆಗೂ ನಮ್ಮ ಹೋರಾಟ ಮುಂದುವರಿಯಲಿದ್ದು, ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಂಡು ಬೆಲೆ ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದರು.