ಬೆಂಗಳೂರು: ರಾಜ್ಯದಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬಿಜೆಪಿ ಅಹೋರಾತ್ರಿ ಧರಣಿ ಪ್ರತಿಭಟನೆ ನಡೆಸುತ್ತಿದೆ.
ಇಂದು ಸಿಎಂ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಹಲವು ಬಿಜೆಪ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫ್ರೀಡಂಪಾರ್ಕ್‌ನಿಂದ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಬಿ.ವೈ.ವಿಜಯೇಂದ್ರ, ಆರ್.ಅಶೋಕ್, ಯಡಿಯೂರಪ್ಪ ಸೇರಿದಂತೆ ಬಿಜೆಪಿ ನಾಯಕರು, ಮುಖಂಡರು ಹಾಗೂ ಕಾರ್ಯಕರ್ತರು ಮುಂದಾಗಿದ್ದರು.
ಈ ವೇಳೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನೆಗೆ ತಡೆಯೊಡ್ಡಿದ್ದು, ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಿ.ಟಿ.ರವಿ ಸೇರಿದಂತೆ ಹಲವು ಶಾಸಕರು ಹಾಗೂ ವಿಧಾನಪರಿಷತ್ ಸದಸ್ಯರನ್ನು ವಶಕ್ಕೆ ಪಡೆದಿದ್ದಾರೆ.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ನಾಯಕರು, ಬೆಲೆ ಏರಿಕೆಯಿಂದ ರಾಜ್ಯದ ಜನ ತತ್ತರಿಸಿ ಹೋಗಿದ್ದಾರೆ. ಸಿದ್ದರಾಮಯ್ಯ ಅವರೇ ಅಧಿಕಾರ ಬಿಟ್ಟು ತೊಲಗಿ, ಡಿ.ಕೆ.ಶಿವಕುಮಾರ್ ಅವರೇ ಜನರ ಭಾವನೆ ಅರ್ಥ ಮಾಡಿಕೊಳ್ಳಿ ಎಂದು ಕಿಡಿಕಾರಿದರು.





