ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಮೂಲಕ ಬಿಜೆಪಿ ವಿನೂತನವಾಗಿ ಪ್ರತಿಭಟನೆ ನಡೆಸಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಬಿಸಿ ಮುಟ್ಟಿಸಿದೆ.
ಬೆಂಗಳೂರು-ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ರಾಮನಗರ, ಹಾಸನ, ಚಿಕ್ಕಮಗಳೂರು, ಧಾರವಾಡ, ಬೆಳಗಾವಿ, ಕಲಬುರಗಿ, ಬಳ್ಳಾರಿ, ರಾಯಚೂರು ಸೇರಿದಂತೆ ಎಲ್ಲಾ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳು ಸೇರಿದಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗುಂಡಿ ಮುಚ್ಚಿ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿತು.
ಪ್ರತಿಭಟನಾ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ.ಶಿವಕುಮಾರ್ ಮತ್ತು ಬೆಂಗಳೂರನ್ನು ಪ್ರತಿನಿಧಿಸುವ ಸಚಿವರ ಭಾವಚಿತ್ರಗಳನ್ನು ಹಿಡಿದು, ಮುಚ್ಚಿ ಮುಚ್ಚಿ ಗುಂಡಿ ಮುಚ್ಚಿ. ಉಳಿಸಿ ಉಳಿಸಿ ಜನರ ಪ್ರಾಣ ಉಳಿಸಿ ಎಂದು ವಿನೂತನವಾಗಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನಸೆಳೆದರು.
ಇದನ್ನು ಓದಿ : ನಾಳೆ ದಸರಾ ಉದ್ಘಾಟನೆ: ಬಿಜೆಪಿಯಿಂದ ಯಾವುದೇ ಪ್ರತಿಭಟನೆ ಇರಲ್ಲ ಎಂದ ಶಾಸಕ ಶ್ರೀವತ್ಸ
ಶಿವಮೊಗ್ಗದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಬೆಂಗಳೂರಿನಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ವಿಧಾನಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು ಸೇರಿದಂತೆ ವಿವಿಧ ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರಕ್ಕೆ ಹಿಡಿಶಾಪ ಹಾಕಿದರು.
ರಾಜ್ಯ ಸರ್ಕಾರ ಕಾಟಾಚಾರಕ್ಕೆ ಅವೈಜ್ಞಾನಿಕವಾಗಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುತ್ತಿದೆ. ಕಳಪೆ ಡಾಂಬರೀಕರಣದಿಂದಾಗಿ ಎಲ್ಲೆಂದರಲ್ಲಿ ಗುಂಡಿಗಳಿವೆ. ಪ್ರಯಾಣಿಕರು ರಸ್ತೆಯಲ್ಲಿ ಸಂಚರಿಸಲು ಭಯಪಡುತ್ತಿದ್ದಾರೆ. ಇತ್ತೀಚೆಗೆ ಅನೇಕ ಸಾವುನೋವು ಸಂಭವಿಸಿರುವುದು ಇದಕ್ಕೆ ಸಾಕ್ಷಿ ಎಂದು ಬಿಜೆಪಿ ನಾಯಕರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.




