ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಟ್ವೀಟ್ ಮಾಡಿದ್ದು, ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವಾದರೆ, ಜನರ ಗತಿಯೇನು? ಎಂದು ಬಿಜೆಪಿ ಪಕ್ಷ ವಾಗ್ದಾಳಿ ನಡೆಸಿದೆ.
ಈ ಬಗ್ಗೆ ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ರಾಜರಾಜೇಶ್ವರಿ ನಗರ ಶಾಸಕರಾದ ಮುನಿರತ್ನ ಅವರ ಮೇಲೆ ಗೂಂಡಾಗಳು ಹಲ್ಲೆ ನಡೆಸಿರುವುದು ಖಂಡನೀಯ. ಕಾಂಗ್ರೆಸ್ ಸರ್ಕಾರದ ಆಡಳಿತಾವಧಿಯಲ್ಲಿ ಕಾನೂನು ಸುವ್ಯವಸ್ಥೆ ಪಾತಾಳಕ್ಕೆ ಕುಸಿದಿರುವುದಕ್ಕೆ ದಿನನಿತ್ಯವೂ ವರದಿಯಾಗುತ್ತಿರುವ ಪ್ರಕರಣಗಳೇ ಸಾಕ್ಷಿಯಾಗಿದೆ ಎಂದು ಕಿಡಿಕಾರಿದೆ.
ಕೆಲವೇ ದಿನಗಳ ಹಿಂದೆ ಶಕ್ತಿಸೌಧದೊಳಗೆ ರೌಡಿಗಳನ್ನು ಒಳಬಿಟ್ಟು ಪರಿಷತ್ ಸದಸ್ಯರ ಮೇಲೆ ಹಲ್ಲೆ ಮಾಡಿಸಿದ್ದ ಕಾಂಗ್ರೆಸ್ ಸರ್ಕಾರ ಈಗ ಜನಪ್ರತಿನಿಧಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿಸಿದೆ. ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲವೆಂದ ಮೇಲೆ ಜನಸಾಮಾನ್ಯರ ಗತಿಯೇನು? ಎಂದು ಪ್ರಶ್ನಿಸಿದೆ.
ಸರ್ಕಾರಿ ಪ್ರಾಯೋಜಿತ ಹಲ್ಲೆ, ದಾಳಿಗಳ ಮೂಲಕ ದ್ವೇಷದ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದೆ.





