ನಂಜನಗೂಡು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದು ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಬೇಟಿ ನೀಡಿ ಪೂಜೆ ಸಲ್ಲಿಸಿದರು.
ಇಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿರುವ ಬಿ.ವೈ.ವಿಜಯೇಂದ್ರ ವಿವಿಧ ಸಭೆ ಸಮಾರಂಭಗಳಲ್ಲಿ ಭಾಗಿಯಾಗಲಿದ್ದಾರೆ. ಈ ವೇಳೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿದ್ದಾರೆ.
ದೇವಾಲಯದಲ್ಲಿ ಪೂಜೆ ಸಲ್ಲಿಸಿದ ವಿಜಯೇಂದ್ರ ಅವರು ಶ್ರೀಕಂಠೇಶ್ವರನಿಗೆ ತುಲಾಭಾರ ಸೇವೆ ಸಲ್ಲಿಸಿದರು. ಬಳಿಕ ಚಾಮರಾಜನಗರದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಗೆ ತೆರಳಿದರು.

ಈ ವೇಳೆ ಹಾಸನದ ಮಾಜಿ ಶಾಸಕ ಪ್ರೀತಮ್‌ಗೌಡ, ಬಿಜೆಪಿ ಮೈಸೂರು ಜಿಲ್ಲಾಧ್ಯಕ್ಷೆ ಮಂಗಳ ಸೋಮಶೇಖರ್, ನಂಜನಗೂಡು ತಾಲೂಕು ಅಧ್ಯಕ್ಷ ಶ್ರೀನಿವಾಸ ರೆಡ್ಡಿ, ಮುಖಂಡರಾದ ಎಂ.ಕೃಷ್ಣಪ್ಪಗೌಡ, ತಾಲೂಕು ಯುವ ಮೋರ್ಚಾ ಅಧ್ಯಕ್ಷ ಮನೋಜ್ ಕುಮಾರ್ ಸೇರಿದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರುಇದ್ದರು.
ಮುಖಾಮುಖಿಯಾದ ವಿಜಯೇಂದ್ರ-ದರ್ಶನ್: ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗು ಸ್ಥಳಿಯ ಶಾಸಕ ದರ್ಶನ್ ಧೃವನಾರಾಯಣ್ ಮುಖಾಮುಖಿಯಾಗಿದ್ದಾರೆ. ಪೂರ್ವ ನಿಯೋಜಿತ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಸ್ಥಳಿಯ ಶಾಸಕರು ದೇವಾಲಯದಲ್ಲಿ ದೇವರ ದರ್ಶನ ಪಡೆಯುವ ವೇಳೆಗೆ ವಿಜಯೇಂದ್ರ ಆಗಮಿಸಿದ್ದಾರೆ. ಅಚಾನಕ್ಕಾಗಿ ಆಗಮಿಸಿದ ಇಬ್ಬರು ನಾಯಕರು ಮುಖಾಮುಖಿಯಾಗಿದ್ದು, ಈ ವೇಳೆ ಇಬ್ಬರ ನಡುವೆ ಯಾವುದೇ ಮಾತುಕತೆಯಾಗಲಿಲ್ಲ.





