ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಈ ದರಿದ್ರ, ಜನವಿರೋಧಿ ಸರ್ಕಾರದಿಂದ ಇನ್ನೇನನ್ನು ನಿರೀಕ್ಷಿಸಲು ಸಾಧ್ಯ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರ್ಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ವಿಫಲವಾಗಿವೆ. ಬೆಲೆ ಏರಿಕೆಯಿಂದ ಜನತೆ ತತ್ತರಿಸಿ ಹೋಗಿದ್ದಾರೆ. ಇವರ ಹುಳುಕನ್ನು ಮುಚ್ಚಿ ಹಾಕಲು ಪದೇ ಪದೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಚುನಾವಣೆಯಲ್ಲಿ ಜನರ ಕಿವಿಗೆ ಹೂವು ಮುಡಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸಿಗರು ಜನರಿಗೆ ಮೋಸ, ವಂಚನೆ ಮಾಡುತ್ತಿದ್ದಾರೆ. ನಾಡಿನ ಜನರು ಈಗಲಾದರೂ ಎಚ್ಚೆತ್ತುಕೊಳ್ಳಬೇಕಿದೆ. ಇದು ಪಿಕ್ ಪಾಕೆಟ್ ಸರ್ಕಾರ ಎಂದು ಕಿಡಿಕಾರಿದರು.





