ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಬಿಜೆಪಿ ಸೋಮವಾರ ಧರ್ಮಸ್ಥಳ ಚಲೋ ಅಭಿಯಾನವನ್ನು ನಡೆಸಲಿದೆ.
ಮೇಲ್ನೋಟಕ್ಕೆ ಈ ಪ್ರಕರಣವು ವ್ಯವಸ್ಥಿತ ಷಡ್ಯಂತ್ರ ಎಂದು ಕಂಡುಬಂದಿರುವುದರಿಂದ ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ವಹಿಸುವಂತೆ ಒತ್ತಾಯಿಸಿ ಬಿಜೆಪಿ ನೇತೃತ್ವದಲ್ಲಿ ಹಿಂದೂಪರ ಸಂಘಟನೆಗಳು ಧರ್ಮಸ್ಥಳ ಚಲೋ ಅಭಿಯಾನವನ್ನು ಹಮ್ಮಿಕೊಂಡಿವೆ.
ಧರ್ಮಸ್ಥಳದ ಸಮೀಪವಿರುವ ಕ್ರೀಡಾಂಗಣದಲ್ಲಿ ಮಧ್ಯಾಹ್ನ 2 ಗಂಟೆಗೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರಮುಖರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಕೇಂದ್ರ ಮಾಜಿ ಸಚಿವ ಡಿ.ವಿ.ಸದಾನಂದಗೌಡ, ಶಾಸಕರಾದ ಅಶ್ವತ್ಥನಾರಾಯಣ, ಎಸ್.ಆರ್.ವಿಶ್ವನಾಥ್, ಹರೀಶ್ ಪೂಂಜಾ, ಸಂಸದರು, ವಿಧಾನಪರಿಷತ್ ಸದಸ್ಯರು, ಮಾಜಿ ಸಚಿವರು, ಮಾಜಿ ಶಾಸಕರು ಹಾಗೂ ಹಿಂದೂಪರ ಕಾರ್ಯಕರ್ತರು ಸೇರಿದಂತೆ ಸುಮಾರು 1 ಲಕ್ಷಕ್ಕೂ ಹೆಚ್ಚು ಸ್ವಯಂಸೇವಕರು ಭಾಗವಹಿಸಲಿದ್ದಾರೆ.
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರದ ವಿರುದ್ಧ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಗೆ ನೈತಿಕ ಬೆಂಬಲ ನೀಡುವ ಉದ್ದೇಶದಿಂದ ಈ ಅಭಿಯಾನವನ್ನು ನಡೆಸಲಾಗುತ್ತದೆ.
ಅಭಿಯಾನವನ್ನು ಯಶಸ್ವಿಯಾಗಿ ನಡೆಸಲು ಬಿಜೆಪಿಯು ಸಂಚಾಲಕರನ್ನು ನೇಮಿಸಿದೆ. ಕಾರ್ಯಕ್ರಮಕ್ಕೆ ಬರುವ ಸ್ವಯಂಸೇವಕರಿಗೆ ಬೆಳಗಿನ ಉಪಹಾರ, ಮಧ್ಯಾಹ್ನದ ಭೋಜನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.





