ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಕೂಗು ಕೇಳಿಬರುತ್ತಿದೆ. ಒಂದೆಡೆ ಬಿಜೆಪಿ ವಿಧಾನಸೌಧದ ಬಳಿ ಸಿದ್ದರಾಮಯ್ಯ ವಿರುದ್ಧ ಪ್ರತಿಭಟನೆ ನಡೆಸಿ ರಾಜೀನಾಮೆಗೆ ಒತ್ತಾಯಿಸುತ್ತಿದ್ದರೆ, ಮತ್ತೊಂದೆಡೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಕೆ.ಬಿ. ಕೋಳಿವಾಡ ಸಹ ಸಿದ್ದರಾಮಯ್ಯ ರಾಜೀನಾಮೆಗೆ ಒತ್ತಾಯಿಸಿದ್ದಾರೆ.
ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿವೆ. ಅಲ್ಲಿ ಈ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಮಾತನಾಡುತ್ತಿವೆ. ಇದರಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಲಹೆ ನೀಡಿದರು.
ತನಿಖೆ ಎದುರಿಸಿ ಅವರು ನಿಷ್ಕಳಂಕಿತರು ಎಂದು ಸಾಬೀತಾದ ನಂತರ ಅವರೇ ಮುಖ್ಯಮಂತ್ರಿಯಾಗಲಿ. ಸಿದ್ದರಾಮಯ್ಯನವರು ರಾಜೀನಾಮೆ ಕೊಡಲ್ಲ ಎನ್ನುತ್ತಿರುವುದು ಅವರ ಅಭಿಪ್ರಾಯ, ಇದು ನನ್ನ ಅಭಿಪ್ರಾಯ ಎಂದು ತಿಳಿಸಿದರು. ಇನ್ನೂ ಮುಂದುವರಿದು ಮಾತನಾಡಿದ ಕೋಳಿವಾಡ ನನಗೂ ಸಿಎಂಗೂ ಹಿಂದೆ ಭಿನ್ನಾಭಿಪ್ರಾಯಗಳಿದ್ದರೂ ಈಗ ಆತ್ಮೀಯವಾಗಿದ್ದೇವೆ. ಆದರೂ ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ನೀಡಲಿ ಎಂದು ಹೇಳುತ್ತಿದ್ದೇನೆ. ಇದು ನನ್ನ ವೈಯಕ್ತಿಕ ಅಭಿಪ್ರಾಯ, ನನ್ನ ಜತೆ ಯಾರೂ ಇಲ್ಲ ಎಂದು ಹೇಳಿದರು.