ಬೆಂಗಳೂರು: ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಿಸುವ ಮೂಲಕ ಸಾರಿಗೆ ವ್ಯವಸ್ಥೆ ಆಶ್ರಯಿಸಿರುವ ರಾಜ್ಯದ ಜನತೆಗೆ ಆಘಾತ ತಂದಿದ್ದೀರಿ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಸಮಾಜಿಕ ಜಾಲತಾಣ ʼಎಕ್ಸ್ʼ ನಲ್ಲಿ ಪೋಸ್ಟ್ ಮಾಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ರಾಜ್ಯದ ಜನತೆಗೆ ಪಂಚಭಾಗ್ಯ ಗ್ಯಾರಂಟಿ ಯೋಜನೆಗಳನ್ನು ನೀಡಿದ್ದೇವೆ ಎಂದು ಹೇಳುತ್ತೀರಾ. ಆದರೆ ಶಕ್ತಿ ಯೋಜನೆಗೆ ಹಣ ಒದಗಿಸಲು ವಿಫಲವಾಗಿರುವ ನೀವು ಸಾರಿಗೆ ಸಂಸ್ಥೆ ನಷ್ಟದ ಹಾದಿ ತುಳಿಯಲು ಕಾರಣರಾಗಿದ್ದೀರಿ ಎಂದು ಆರೋಪಿಸಿದ್ದಾರೆ.
ನಿಮ್ಮ ಈ ಗ್ಯಾರಂಟಿ ಯೋಜನೆಗಳು ವಾಣಿಜ್ಯ ಉತ್ಪನ್ನಗಳ ಮಾರಾಟದ ಮಳಿಗೆಗಳಲ್ಲಿ ಒಂದು ಖರೀದಿಸಿದರೆ ಮತ್ತೊಂದು ಫ್ರೀ ಎನ್ನುವ ಆಗಿದೆ. ಒಂದನ್ನು ಕೊಡುವುದು ಇನ್ನೊಂದರಲ್ಲಿ ಕಿತ್ತುಕೊಳ್ಳುವುದು ಎಂದು ವ್ಯಂಗ್ಯವಾಡಿದ್ದಾರೆ.
ಶೇಕಡಾ.15 ರಷ್ಟು ಬಸ್ ಪ್ರಯಾಣ ದರ ಹೆಚ್ಚಿಸುವ ಮೂಲಕ ʼಮಹಿಳೆಯರಿಗೆ ಉಚಿತ. ಪುರುಷರಿಗೆ ಅದರ ಹೊರೆ ಖಚಿತʼ ಎನ್ನುವ ಹಾಗೆ ಮಾಡಿದ್ದೀರಾ. ಇದನ್ನು ವಿರೋಧಿಸಿ ಬಿಜೆಪಿ ಜನರ ಪರ ಧ್ವನಿ ಎತ್ತಲಿದೆ ಎಂದು ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪ್ರಯಾಣ ದರ ಏರಿಕೆಯ ಪ್ರಸ್ತಾಪವನ್ನು ಇಲ್ಲಿಗೆ ಕೈ ಬಿಡಬೇಕು. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಲಿದೆ. ಯಾವುದೇ ಕಾರಣಕ್ಕೂ ಬಸ್ ಪ್ರಯಾಣ ದರ ಏರಿಕೆ ಮಾಡಬಾರದು ಎಂದು ಆಗ್ರಹಿಸಿದರು. ಒಂದು ವೇಳೆ ಪ್ರಯಾಣ ದರ ಏರಿಕೆ ಮಾಡಿದರೆ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.