ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಕಣ ರಂಗೇರಿದೆ.
ಚನ್ನಪಟ್ಟಣ ಕ್ಷೇತ್ರದಲ್ಲಿ ಬಿಜೆಪಿ ಅಥವಾ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ ಮಾಡಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಸಿದ್ಧತೆ ಮಾಡಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.
ಇದೇ ಗುರುವಾರ ಅಥವಾ ಶುಕ್ರವಾರ ನಾಮಪತ್ರ ಸಲ್ಲಿಸಲು ಯೋಗೇಶ್ವರ್ ಅವರು ಎಲ್ಲಾ ತಯಾರಿ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ನಾಮಪತ್ರ ಸಲ್ಲಿಸಲು ಎರಡು ಸೆಟ್ ಅಫಿಡವಿಟ್ ಸಿದ್ಧ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಯೋಗೇಶ್ವರ್ ನಡೆಗೆ ಎನ್‌ಡಿಎ ನಾಯಕರೇ ಕಂಗಾಲಾಗಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮಾತಾಗಿದೆ.
ಯೋಗೇಶ್ವರ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಅಫಿಡವಿಟ್ ಸಿದ್ಧಪಡಿಸಿಕೊಂಡಿದ್ದಾರೆ ಎನ್ನಲಾಗಿದ್ದು, ಬಿಜೆಪಿಯಿಂದ ಟಿಕೆಟ್ ಸಿಗದಿದ್ದರೆ ಪಕ್ಷೇತರವಾಗಿ ಸ್ಪರ್ಧೆ ಮಾಡಲು ಎಲ್ಲಾ ರೀತಿಯಲ್ಲೂ ತಯಾರಿ ಮಾಡಿಕೊಂಡಿದ್ದಾರೆ.





