ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ತೆಗೆದುಕೊಳ್ಳಲಾಗಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌ಕೆ ಪಾಟೀಲ್, ಇತ್ತೀಚೆಗೆ ಮತದಾರರ ಪಟ್ಟಿ ತಯಾರಿಕೆಯಲ್ಲಿ ಬದಲಾವಣೆಯಾಗಿದೆ. ದೊಡ್ಡ ಪ್ರಮಾಣದಲ್ಲಿ ಇಲ್ಲದವರ ಹೆಸರು ಸೇರಿಸಲಾಗಿದೆ. ಮತಗಳ್ಳತನ ಚರ್ಚೆ ಮಾತು ನಡೆದಿದೆ. ಇವಿಎಂ ಬಗ್ಗೆ ಜನರಲ್ಲಿ ವಿಶ್ವಾಸಾರ್ಹತೆ ಕಡಿಮೆ ಆಗುತ್ತಿದೆ. ಹೀಗಾಗಿ ಇವಿಎಂ ಬದಲಾಗಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದು ಸ್ಪಷ್ಟಪಡಿಸಿದರು.
ರಾಜ್ಯ ಚುನಾವಣಾ ಆಯೋಗ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾರರ ಪಟ್ಟಿಯನ್ನು ಸಿದ್ದಪಡಿಸಲು, ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಅಗತ್ಯ ಕಾನೂನು ತಿದ್ದುಪಡಿ ತರಲು, ನಿಯಮಾವಳಿ ರಚನೆ ಮಾಡಲು ಕ್ಯಾಬಿನೆಟ್ ಅನುಮೋದನೆ ಸಿಕ್ಕಿದೆ. ಈ ಪ್ರಕ್ರಿಯೆಯಲ್ಲಿ ಅಗತ್ಯ ಕಾನೂನು ಮತ್ತು ನಿಯಮಾವಳಿಗಳಿಗೂ ಕೆಲವು ತಿದ್ದುಪಡಿ ಮಾಡಬೇಕಾಗುತ್ತದೆ. ತಿದ್ದುಪಡಿ ಮಾಡಲು ಅಗತ್ಯ ಕಾನೂನು ಮಾಡಲು ಕ್ಯಾಬಿನೆಟ್ ಶಿಫಾರಸು ಮಾಡಿದೆ. ಹೀಗಾಗಿ ರಾಜ್ಯ ಚುನಾವಣಾ ಆಯೋಗವು, ರಾಜ್ಯ ಮಾಡಿದ ಕಾನೂನಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ತಿಳಿಸಿದರು.





